ನವದೆಹಲಿ:
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ದೊಡ್ಡ ರಿಲೀಫ್ ನೀಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಸಿ.ಟಿ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದ ಆರೋಪದ ಮೇಲೆ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಟಿ ರವಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ಪೀಠ, ಸಿ.ಟಿ. ರವಿ ವಿರುದ್ಧ ವಿಚಾರಣಾ ಪ್ರಕ್ರಿಯೆಗಳಿಗೆ ತಡೆ ನೀಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲರಿಗೆ ನೋಟಿಸ್ ಜಾರಿ ಮಾಡಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19ರಂದು ವಿಧಾನ ಪರಿಷತ್‌ನಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡೆಯವಾಗ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದರು. ಈ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
