ಬೆಂಗಳೂರು
ಉನ್ನತ ಶಿಕ್ಷಣ ಪಡೆಯಲು ಗ್ರಾಮೀಣ ಭಾಗದ ಬಡ ಪ್ರತಿಭಾನ್ವಿತ ವಿಧ್ಯಾರ್ಥಿಗಳು ಅವಲಂಬಿಸುವುದು ಸರ್ಕಾರಿ ವಿಶ್ವ ವಿದ್ಯಾಲಯಗಳನ್ನು. ಆದರೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ ಇಲ್ಲದಂತಾಗಿದ್ದು, ವಿದ್ಯಾರ್ಥಿಗಳ ಕಲಿಕೆಯಲ್ಲಿ ಕುಂಠಿತವಾಗುವುದು ಅಷ್ಟೇ ಅಲ್ಲದೇ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ಈಗಾಗಲೇ ವರದಿಯಾಗಿದೆ. ಈಗ ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಪಕರ ಕೊರತೆ ಎದುರಾಗಿದೆ.
ಪದವಿ ಕೋರ್ಸ್ ಮುಗಿಸಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಸ್ನಾತಕೋತ್ತರ ಪದವಿಗೆ ಅಡ್ಮಿಷನ್ ಪಡೆಯುವ ವಿಧ್ಯಾರ್ಥಿಗಳು ಸಾಕಷ್ಟು ಕನಸುಗಳನ್ನು ಹೊತ್ತು ಬಂದಿರುತ್ತಾರೆ. ಜ್ಞಾನ ದೇಗುಲ ಎಂದೇ ಕರೆಸಿಕೊಳ್ಳುವ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಮಟ್ಟದ ಜ್ಞಾನ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟು ಕೊಂಡಿರುತ್ತಾರೆ. ಆದರೆ ವಿಧ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಬೋಧನಾ ಸಿಬ್ಬಂದಿಯನ್ನು ಪೂರೈಸದ ಸರ್ಕಾರದ ನಡೆ ಬೇಸರ ಉಂಟು ಮಾಡುತ್ತಿದೆ ಎಂಬ ಆಕ್ರೋಶದ ಮಾತುಗಳು ಕೇಳಿಬರುತ್ತಿವೆ.
ವಿಧ್ಯಾರ್ಥಿಗಳ ಬೇಡಿಕೆಗೆ ತಕ್ಕಂತ ನುರಿತ ಕಾಯಂ ಪ್ರಾಧ್ಯಾಪಕರು ವಿಶ್ವ ವಿದ್ಯಾಲಯಗಳಲ್ಲಿ ಇಲ್ಲದಂತಾಗಿದ್ದು, ಪ್ರತಿ ಬಾರಿಯೂ ಅತಿಥಿ ಉಪನ್ಯಾಸಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಬೋಧನೆಯಿಂದಲೇ ಸ್ನಾತಕೋತ್ತರ ವಿಧ್ಯಾರ್ಥಿಗಳು ತೃಪ್ತಿ ಪಡುವಂತಾಗಿದೆ. ನುರಿತ ಕಾಯಂ ಉಪನ್ಯಾಸಕರು ಹಾಗೂ ತಾತ್ಕಾಲಿಕ ಉಪನ್ಯಾಸಕರ ಬೋಧನೆ ನಡುವೆ ಸಾಕಷ್ಟು ವ್ಯತ್ಯಾಸ ಇದ್ದು, ವಿಧ್ಯಾರ್ಥಿಗಳ ಕಲಿಕೆಯ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ ಆದಷ್ಟು ಬೇಗ ಕಾಯಂ ಪ್ರಾಧ್ಯಾಪಕರನ್ನು ನೇಮಕ ಮಾಡುವಂತೆ ವಿದ್ಯಾರ್ಥಿಗಳು ಹಾಗೂ ಕುಲಪತಿಗಳು ಒತ್ತಾಯಿಸುತ್ತಿದ್ದಾರೆ.
ಒಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಮಾತ್ರ ಅಲ್ಲದೆ ವಿಶ್ವ ವಿದ್ಯಾಲಯಗಳಲ್ಲಿ ಸಹ ಸೂಕ್ತ ಮತ್ತು ಅಗತ್ಯ ಪ್ರಮಾಣದ ಬೋಧನಾ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಬೇಕಾದ ಪದವಿ ವಿಧ್ಯಾರ್ಥಿಗಳಿಗೆ ಹಿನ್ನಡೆ ಆಗುತ್ತಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದ ಪ್ರಾಧ್ಯಾಪಕರನ್ನು ನೇಮಕ ಮಾಡುವ ಪ್ರಕ್ರಿಯೆಗೆ ವೇಗ ನೀಡಬೇಕಾಗಿದೆ.








