ಬೆಂಗಳೂರು:
ಕರಾವಳಿ, ಮಲೆನಾಡಿನಲ್ಲಿ ಮಳೆಯ ಆರ್ಭಟ ಮಂಗಳವಾರವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ . ಇನ್ನು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವೆಡೆಗಳಲ್ಲಿಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಜೂನ್ 19ರವರೆಗೆ ಗಂಟೆಗೆ 65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ, ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ (50-60 ಕಿ.ಮೀ. ವೇಗ) ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಹೆಚ್ಚು. ಇನ್ನು 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರನ ಇರಲಿದೆ. ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ (ಗಂಟೆಗೆ 50-60 ಕಿ.ಮೀ. ವೇಗ) ಸುರಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮಂಗಳವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಅತೀ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ 1 ಅಥವಾ 2 ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಧಾರವಾಡ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಗದಗ, ಕಲಬುರಗಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.
ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ, ಅತಿ ಭಾರಿ ಮಳೆ ಕಂಡು ಬರಲಿದೆ. ಬೆಂಗಳೂರು (ನಗರ, ಗ್ರಾಮಾಂತರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಕೋಲಾರ, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾಸನ, ತುಮಕೂರು, ಬಳ್ಳಾರಿ, ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರಿ ಮಳೆ ಸುರಿಯಲಿರುವುದರಿಂದ ವಿವಿಧ ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದೆ. ಜತೆಗೆ ತಗ್ಗು ಪ್ರದೇಶಗಳಿಗೆ ಪ್ರವಾಹ ನುಗ್ಗಲಿದೆ. ಜತೆಗೆ ಕರಾವಳಿ ಮತ್ತು ಘಾಟಿ ಪ್ರದೇಶಗಗಳಲ್ಲಿ ಭೂಕುಸಿತ/ಮಣ್ಣು ಕುಸಿತ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಎಂದು ಮುನ್ಸೂಚನೆ ನೀಡಲಾಗಿದೆ.
