ಬೆಂಗಳೂರು:
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿ, ಕೆಆರ್ ಪುರಂ ನಿವಾಸ ಪ್ರಮೋದ್ ಗೌಡ(20)ನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಮೋದ್ ಗೌಡ, ತನ್ನ ಫ್ರೆಂಡ್ ಮೊಬೈಲ್‌ನಲ್ಲಿ ಅಕೌಂಟ್ ಓಪನ್ ಮಾಡಿ, ನಟಿ ರಮ್ಯಾ ಅವರ ಇನ್‌ಸ್ಟಾಗ್ರಾಂ ಖಾತೆಗೆ ಅಶ್ಲೀಲ ಮತ್ತು ಬೆದರಿಕೆ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ಪ್ರಮೋದ್ ಗೌಡ- 87 ಎಂಬ ಅಕೌಂಟ್‌ನಿಂದ ಮೆಸೇಜ್ ಮಾಡಿದ್ದ ಪ್ರಮೋದ್ ಗೌಡನನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಈ ಸಂಬಂಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ, ‘ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಕಿರಣ ಇದ್ದಂತೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿ’ ಎಂದು ಬರೆದಿದ್ದರು. ಇದರಿಂದ ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡ ಆರೋಪಿಗಳು ರಮ್ಯಾ ಅವರನ್ನು ನಿಂದಿಸಿದ್ದರು. ಅಶ್ಲೀಲವಾಗಿ ಕಮೆಂಟ್ ಮಾಡುವುದಲ್ಲದೆ, ಅಶ್ಲೀಲ ಮತ್ತು ಬೆದರಿಕೆ ಸಂದೇಶವನ್ನು ಕಳುಸಿಹಿಸಿದ್ದರು.








