ಕಾಂಗ್ರೆಸ್ ವಿದೇಶಾಂಗ ವ್ಯವಹಾರ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಶರ್ಮಾ ರಾಜೀನಾಮೆ

ನವದೆಹಲಿ:

     ಕಾಂಗ್ರೆಸ್ ಪಕ್ಷದಲ್ಲಿ ಹಲವು ಮಹತ್ವದ ಬದಲಾವಣೆಗಳಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ವಿದೇಶಾಂಗ ವ್ಯವಹಾರ ಮುಖ್ಯಸ್ಥರಾಗಿದ್ದ ಹಿರಿಯ ನಾಯಕ ಆನಂದ್ ಶರ್ಮಾ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿರುವ ಆನಂದ್ ಶರ್ಮಾ, ಕಳೆದ ಕೆಲ ದಶಕಗಳಿಂದ ಕಾಂಗ್ರೆಸ್ ಪಕ್ಷದ ವಿದೇಶಾಂಗ ವ್ಯವಹಾರಗಳ ಮುಖ್ಯಸ್ಥರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಯುವಕರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಆನಂದ್ ಶರ್ಮಾ ಕಾಂಗ್ರೆಸ್ ಪಕ್ಷದಲ್ಲಿ ವಿದೇಶಾಂಗ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.

    ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪಕ್ಷದ ನಾಯಕತ್ವಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಪುನರ್ರಚನೆಗೆ ಅನುಕೂಲವಾಗುವಂತೆ ನಾನು ಡಿಎಫ್‌ಎ (ವಿದೇಶಾಂಗ ವ್ಯವಹಾರಗಳ ಇಲಾಖೆ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಶರ್ಮಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸದಸ್ಯರಾಗಿರುವ ಶರ್ಮಾ, ಸುಮಾರು ನಾಲ್ಕು ದಶಕಗಳಿಂದ ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ಕಾಂಗ್ರೆಸ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದಾಗ್ಯೂ, ಆನಂದ್ ಶರ್ಮಾ ಕಾಂಗ್ರೆಸ್ ಸದಸ್ಯರಾಗಿ ಮುಂದುವರೆದಿದ್ದಾರೆ.

    ಈ ಹಿಂದೆ ಅವರು ಈ ಹಿಂದೆ ಭಾರತ-ಅಮೆರಿಕ ಪರಮಾಣು ಒಪ್ಪಂದದ ಮಾತುಕತೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ, ಪರಮಾಣು ಪೂರೈಕೆದಾರರ ಗುಂಪಿನಲ್ಲಿ ಭಾರತ-ನಿರ್ದಿಷ್ಟ ವಿನಾಯಿತಿಗಳನ್ನು ಪ್ರತಿಪಾದಿಸಿದ್ದರು. ಆಪರೇಷನ್ ಸಿಂದೂರ್‌ ನಂತರ ಭಾರತದ ನಿಲುವನ್ನು ಮಂಡಿಸಲು ವಿದೇಶಗಳಿಗೆ ಕಳುಹಿಸಲಾದ ಇತ್ತೀಚಿನ ಸರ್ವಪಕ್ಷ ಸಂಸದೀಯ ನಿಯೋಗಗಳಲ್ಲಿ ಅವರು ಸದಸ್ಯರಾಗಿದ್ದರು. 2008 ರ ಮುಂಬೈ ಭಯೋತ್ಪಾದಕ ದಾಳಿಯ ನಂತರ ಶರ್ಮಾ ಭಾರತದ ನಿಲುವನ್ನು ಜಗತ್ತಿಗೆ ಸ್ಪಷ್ಟಪಡಿಸಿದ್ದರು. ಅವರು ವಾಣಿಜ್ಯ ಸಚಿವರಾಗಿದ್ದ ಅವಧಿಯಲ್ಲಿ, ಮೊಟ್ಟಮೊದಲ WTO ಒಪ್ಪಂದ ಮತ್ತು ಸಮಗ್ರ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕಲಾಯಿತು. 

    ಕಾಂಗ್ರೆಸ್ ವಿದೇಶಾಂಗ ವಿಭಾಗ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿದೆ. ವಿಶ್ವದ ಇತರ ದೇಶಗಳ ಪಕ್ಷಗಳ ಜೊತೆ ಉತ್ತಮ ಸಂಬಂಧ ಬೆಳೆಸಿಕೊಂಡಿದೆ. ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ನಿಲುವು ಸಿದ್ಧಾಂತಕ್ಕೆ ಹೊಂದಿಕೆಯಾಗುವ ಪಕ್ಷಗಳ ಜೊತೆ ಆತ್ಮೀಯತೆ ಬೆಳೆಸಿಕೊಂಡಿದೆ. ಏಷ್ಯಾ, ಆಫ್ರಿಕಾ, ಯೂರೋಪ್, ಮಧ್ಯ ಪ್ರಾಚ್ಯ, ಲ್ಯಾಟಿನ್ ಅಮೆರಿಕ ದೇಶಗಳ ಪಕ್ಷಗಳ ಜೊತೆ ಕಾಂಗ್ರೆಸ್ ಉತ್ತಮ ಸಂಬಂಧ ಬೆಳೆಸಿಕೊಂಡಿದೆ ಎಂದು ಆನಂದ್ ಶರ್ಮಾ ಹೇಳಿದ್ದಾರೆ. ಪಕ್ಷದಲ್ಲಿ ಈ ಮಹತ್ತರ ಜವಾಬ್ದಾರಿ ನೀಡಿರುವುದಕ್ಕೆ ಧನ್ಯವಾದ ತಿಳಿಸಿರುವ ಆನಂದ್ ಶರ್ಮಾ, ಜವಾಬ್ದಾರಿ ವಹಿಕೊಳ್ಳುವ ಹೊಸ ತಂಡಕ್ಕೆ ಶುಭ ಹಾರೈಸಿದ್ದಾರೆ.

Recent Articles

spot_img

Related Stories

Share via
Copy link