ನವದೆಹಲಿ :
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಂಡಿದೆ. ಬೇಲ್ ರದ್ದುಗೊಳಿಸಿ ಇಂದು ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ತಕ್ಷಣ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೇಲ್ ರದ್ದಾಗಿರುವ ಬೆನ್ನಲ್ಲೇ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಅವರನ್ನು ಪೊಲೀಸ್ ಅರೆಸ್ಟ್ ಮಾಡಿದ್ದಾರೆ. ಇನ್ನೇನು ಕೆಲವೇ ಕ್ಷಣದಲ್ಲಿ ಆಕೆಯನ್ನು ವಶಕ್ಕೆ ಪಡೆದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಿದ್ದಾರೆ.
ಬೆಂಗಳೂರಿನ ರಾಜ ರಾಜೇಶ್ವರಿನಗರದಲ್ಲಿರುವ ನಿವಾಸದಲ್ಲಿದ್ದ ಪವಿತ್ರಾಗೌಡ ಅವರನ್ನು ಗೋವಿಂದರಾಜನಗರ ಪೊಲೀಸ್ ಠಾಣೆ ಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ಅರೆಸ್ಟ್ ಮಾಡಲಾಗಿದೆ. ಇನ್ನು ಪವಿತ್ರ ಗೌಡ ಬಂಧನವಾಗುತ್ತಿದ್ದಂತೆ ಆಕೆಯ ತಾಯಿ ಮತ್ತು ಮಗಳು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.
ಕಳೆದ 2024 ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠ ಹೈಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಸುಪ್ರೀಂ ಪೀಠದ ನ್ಯಾ.ಆರ್. ಮಹಾದೇವನ್ ಅವರು ತೀರ್ಪು ಓದಿದರು. ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದರು. ಹೈಕೋರ್ಟ್ ಆದೇಶಗಳ ಲೋಪವನ್ನು ಇದೇ ವೇಳೆ ಸುಪ್ರೀಂ ಕೋರ್ಟ್ ಎತ್ತಿ ತೋರಿಸಿತು. ಅಲ್ಲದೆ ಶೀಘ್ರವಾಗಿ ಸಾಕ್ಷಿಗಳ ವಿಚಾರಣೆ ನಡೆಸಲು ಆದೇಶ ಹೊರಡಿಸಿದರು.
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಸುಪರಿಂಟೆಂಡೆಂಟ್‌ನನ್ನು ಸಸ್ಪೆಂಡ್ ಮಾಡಬೇಕಿತ್ತು. ಇನ್ನು ಮುಂದೆ ರಾಜಾತಿಥ್ಯದ ಯಾವುದೇ ಫೋಟೋ ಕಂಡುಬಂದರೆ, ಆರೋಪಿ ಜೈಲಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿ ಜಾಮೀನು ರದ್ದುಗೊಳಿಸಿದರು.
