ಮಡಿಕೇರಿ:
ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಈ ವರ್ಷ ಮಧ್ಯಾಹ್ನದ ಸಮಯದಲ್ಲಿ ತೀರ್ಥೋದ್ಭವ ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾವೇರಿ ಮಾತೆಯ ದರ್ಶನ ಪಡೆಯಲು ಆಗಮಿಸುವ ನಿರೀಕ್ಷೆ ಇರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಸುತ್ತಲೂ ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್‌ಗಳು, ಹೂವಿನ ಅಲಂಕಾರ ಮತ್ತಿತರ ಕೆಲಸ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್‌ಇಡಿ ಪರದೆಗಳು, ಫೋಟೋಗ್ರಫಿ ಮತ್ತು ಭಕ್ತಾದಿಗಳ ಭದ್ರತೆಯ ದೃಷ್ಟಿಯಿಂದ ಅವಶ್ಯವಿರುವ ಕಡೆಗಳಲ್ಲಿ ಸಿ.ಸಿ. ಕ್ಯಾಮೆರಾಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಚ್.ಅರುಣ್ ಮಾಚಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್, ಇತರರು ಪಾಲ್ಗೊಳ್ಳಲಿದ್ದಾರೆ.
ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ಡಾ.ವೆಂಕಟೇಶ್ ಎಂ.ವಿ., ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ.ಯು. ಮೋಟಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
