ಬೆಂಗಳೂರು:
ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಸಚಿವರು ಸುದ್ದಿಗೋಷ್ಠಿಯಲ್ಲಿ ಚಳಿಗಾಲದ ಅಧಿವೇಶನದ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟದ ಉಪಸಮಿತಿಗಳು ಆರು ತಿಂಗಳ ಅವಧಿ ಮೀರಿ ವರದಿಯನ್ನು ಸಲ್ಲಿಸಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ನಡೆದಿರುವ ಖರೀದಿಗಳ ಕುರಿತು ತನಿಖೆಗೆ ನ್ಯಾ. ಮೈಕಲ್ ಡಿ.ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ವಿಚಾರಣಾ ಆಯೋಗದ ವರದಿ ಅನ್ವಯ ತೆಗೆದುಕೊಳ್ಳಬೇಕಾಗುವ ಕ್ರಮಗಳ ಮೇಲೆ ಮೇಲುಸ್ತುವಾರಿ ಮಾಡಲು ಹಾಗೂ ಉನ್ನತ ಮಟ್ಟದ ಸಮಿತಿಯ ವರದಿ ಮಾಡಲು ಸೂಕ್ತ ಶಿಫಾರಸುಗಳನ್ನು ಮಾಡುವ ಸಮಿತಿ, ರಾಜ್ಯ ವಿವಿಗಳ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಪರಾಮರ್ಶಿಸಿ ಸೂಕ್ತ ಶಿಫಾರಸುಗಳನ್ನು ಮಾಡುವ ಸಮಿತಿ, ಬೆಂಗಳೂರು – ಮೈಸೂರು ಮೂಲಸೌಕರ್ಯ ಕಾರಿಡಾರ್ ಅನುಷ್ಠಾನದ ಕುರಿತು ಈವರೆಗೆ ಆಗಿರುವ ಪ್ರಗತಿ ಹಾಗೂ ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸುಗಳನ್ನು ಮಾಡಲು ಉಪಸಮಿತಿಗಳು ವರದಿಗಳನ್ನು ಆದಷ್ಟು ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ ಗೆಲುವು ದೊರೆತಿದೆ. ಯೋಜನೆಯ ಬಗ್ಗೆ ಕಾರ್ಯಪ್ರವೃತ್ತರಾಗಲು ಹಸಿರುನಿಶಾನೆ ದೊರಕಿದ್ದು, ಈ ಹೋರಾಟದಲ್ಲಿ ಬೆಂಬಲವಾಗಿ ನಿಂತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಅಭಿನಂದಿಸಿದೆ ಎಂದು ಸಚಿವರು ತಿಳಿಸಿದರು.
ಮೇಕೆದಾಟು ಯೋಜನೆಗೆ 7 ವರ್ಷದಿಂದ ಅಡ್ಡಗಾಲು ಹಾಕಿದ್ದ ತಮಿಳುನಾಡು, ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಮೇಕೆದಾಟು ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದೆ. ಯಾವುದೇ ನಿರ್ಮಾಣ ಕಾರ್ಯ ಚಾಲನೆ ದೊರೆತಿರುವುದಿಲ್ಲ ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿರುವ ಕಾರಣ, ಸುಪ್ರೀಂಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿರುವುದಾಗಿ ಸಚಿವರು ವಿವರಿಸಿದರು.








