ಬಳ್ಳಾರಿ
ಬಳ್ಳಾರಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಲಾಗಿದೆ. ಬ್ಯಾನರ್ ಕಟ್ಟುವ ವಿಚಾರವಾಗಿ ಶಾಸಕ ಭರತ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಗುರುವಾರ ರಾತ್ರಿ ಘರ್ಷಣೆ ಸಂಭವಿಸಿ, ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು. ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿಲ್ಲ ಎಂಬ ಕಾರಣ ನೀಡಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಬಳ್ಳಾರಿಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದಿತ್ತು. ಈ ವೇಳೆ ಕಲ್ಲು ತೂರಾಟ ಸೇರಿ ಅಹಿತಕರ ಘಟನೆಗಳು ನಡೆದಿವೆ. ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿಲ್ಲ ಮತ್ತು ಹಿರಿಯ ಅಧಿಕಾರಿಗಳಿಗೆ ಪರಿಸ್ಥಿತಿಯ ಬಗ್ಗೆ ಸರಿಯಾಗಿ ತಿಳಿಸಲು ವಿಫಲರಾಗಿದ್ದಾರೆ ಎಂದು ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಬಳ್ಳಾರಿ ವಲಯ ಡಿಐಜಿಪಿ ಮತ್ತು ಡಿಜಿ-ಐಜಿಪಿ ಶಿಫಾರಸು ಶಿಫಾರಸು ಮೇರೆಗೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕೆ.ವಿ.ಅಶೋಕ್ ಅವರು ಆದೇಶ ಹೊರಡಿಸಿದ್ದಾರೆ.
ವಿಜಯನಗರ ಲೋಕಾಯುಕ್ತ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಕಳೆದ ಡಿಸೆಂಬರ್ 31 ರಂದು ಬಳ್ಳಾರಿ ಎಸ್ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಕಳೆದ ಒಂದೂವರೆ ವರ್ಷದಿಂದ ಬಳ್ಳಾರಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಶೋಭಾರಾಣಿ ವಿ.ಜೆ.ಅವರನ್ನು ಮಂಡ್ಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಪವನ್ ನೆಜ್ಜೂರ್ ಅವರನ್ನು ವರ್ಗಾಯಿಸಲಾಗಿತ್ತು. ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರ್ ಅಮಾನತುಗೊಂಡಿದ್ದಾರೆ.








