ಸಚಿವ ಡಿ.ಸುಧಾಕರ್ ನಿಧನ

ಹಿರಿಯೂರು: ರಾಜ್ಯ ರಾಜಕಾರಣದ ಪ್ರಭಾವಿ ನಾಯಕ, ಹಿರಿಯೂರು ಕ್ಷೇತ್ರದ ಶಾಸಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ.ಸುಧಾಕರ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ತೀವ್ರವಾಗಿ ಅಸ್ವಸ್ಥರಾಗಿದ್ದ ಸಚಿವರು, ಕಳೆದ ನಲವತ್ತು ದಿನಗಳಿಂದ ಕೋಮಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.

​ಅಲ್ಪಸಂಖ್ಯಾತ ಜೈನ ಸಮುದಾಯಕ್ಕೆ ಸೇರಿದ ಡಿ.ಸುಧಾಕರ್ ಅವರು ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಇವರು ಮೊದಲ ಬಾರಿಗೆ 2003ರ ವಿಧಾನಸಭಾ ಚುನಾವಣೆಯಲ್ಲಿ ಚಳ್ಳಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಗಳಿಸುವ ಮೂಲಕ ಶಾಸಕರಾಗಿ ಆಯ್ಕೆಯಾದರು. ತಮ್ಮ ಐದು ವರ್ಷಗಳ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ದ ಸುಧಾಕರ್ ಅವರು, ಸದಾ ಜನರ ನಡುವೆ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಬಡವರಿಗೆ ಮತ್ತು ಸಾಮಾಜಿಕ ಸಂಸ್ಥೆಗಳಿಗೆ ದಾನ ಧರ್ಮ ಮಾಡುವ ಮೂಲಕ ಅವರು ಜಿಲ್ಲೆಯಾದ್ಯಂತ ಮನೆಮಾತಾಗಿದ್ದರು.

​2008ರ ಕ್ಷೇತ್ರ ಮರುವಿಂಗಡಣೆ ಸುಧಾಕರ್ ಅವರ ರಾಜಕೀಯ ಜೀವನದಲ್ಲಿ ಮಹತ್ವದ ತಿರುವು ನೀಡಿತು. ಚಳ್ಳಕೆರೆ ಕ್ಷೇತ್ರವು ಎಸ್‌ಟಿ ಮೀಸಲು ಕ್ಷೇತ್ರವಾಗಿ ಬದಲಾದಾಗ, ಸುಧಾಕರ್ ಅವರು ಸಾಮಾನ್ಯ ಕ್ಷೇತ್ರವಾಗಿದ್ದ ಹಿರಿಯೂರು ಕ್ಷೇತ್ರವನ್ನು ಆಯ್ದುಕೊಂಡರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೈತಪ್ಪಿದರೂ ಧೃತಿಗೆಡದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಹಿರಿಯೂರು ಜನರ ವಿಶ್ವಾಸ ಗಳಿಸಿ ಜಯಭೇರಿ ಬಾರಿಸಿದರು. ಅಂದಿನಿಂದ ಇಂದಿನವರೆಗೂ ಹಿರಿಯೂರು ಕ್ಷೇತ್ರದ ಧೀಮಂತ ನಾಯಕನಾಗಿ ಗುರುತಿಸಿಕೊಂಡಿದ್ದರು.

​ಪ್ರಸ್ತುತ ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದ ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಬಡವರ ಪರ ಕಾಳಜಿ ಹೊಂದಿದ್ದ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹೆಸರಾಗಿದ್ದ ಸುಧಾಕರ್ ಅವರ ಅಗಲಿಕೆ ಚಿತ್ರದುರ್ಗ ಜಿಲ್ಲೆಯ ಜನರಿಗೆ ಹಾಗೂ ಕರ್ನಾಟಕ ರಾಜಕಾರಣಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

Recent Articles

spot_img

Related Stories

Share via
Copy link