
ಬೆಂಗಳೂರು: ನಾಯಕತ್ವ ಬದಲಾವಣೆಯ ಚರ್ಚೆ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರು ರಾಜಭವನ ಭೇಟಿಗೆ ಸಮಯಾವಕಾಶ ಕೋರಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ನಾಳೆಯೇ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗೆ ಪುಷ್ಟಿ ಸಿಕ್ಕಿದೆ.
ದೆಹಲಿಯಲ್ಲಿ ಹೈಕಮಾಂಡ್ ಜೊತೆಗಿನ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಚರ್ಚೆ ಜೋರಾಗಿ ಕೇಳಿಬರುತ್ತಿದೆ. ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಜೊತೆಗೆ ಅಧಿಕಾರ ಹಸ್ತಾಂತರದ ಬಗ್ಗೆ ಸಭೆ ವೇಳೆ ಚರ್ಚೆ ನಡೆಸಿದ್ದರು. ಅಲ್ಲದೆ, ರಾಷ್ಟ್ರೀಯ ರಾಜಕಾರಣಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು. ರಾಜ್ಯಸಭೆ ಸ್ಥಾನಕ್ಕೆ ಬರುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.
ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಎರಡು ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂಬ ಚರ್ಚೆ ಜೋರಾಗಿ ಹರದಾಡಲು ಆರಂಭವಾಯಿತು. ಕಾಂಗ್ರೆಸ್ ಪಾಳೆಯದಿದಂಲೇ ಈ ಬಗ್ಗೆ ಮಾಹಿತಿ ಹೊರಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಗೆ ರಾಜಭವನ ಕಚೇರಿಯಿಂದ ಸಮಯಾವಕಾಶ ಕೋರಿದ್ದಾರೆ ಎಂದು ಸಿಎಂ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಪಾಲರಿಂದ ಸಮಯಾವಕಾಶಕ್ಕೆ ಕಾಯಲಾಗುತ್ತಿದೆ. ಇಂದು ರಾತ್ರಿಯೊಳಗೆ ರಾಜಭವನದಿಂದ ಸಮಯಾವಕಾಶ ಸಿಗುವ ನಿರೀಕ್ಷೆಯಲಿದ್ದಾರೆ. ನಾಳೆ ಭೇಟಿಗೆ ಸಮಯಾವಕಾಶ ನೀಡಿದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಚರ್ಚೆಯಾಗುತ್ತಿದೆ. ಗುರುವಾರ ಬೆಳಗ್ಗೆ 10:30 ಬಳಿಕ ಸಿಎಂ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವ ಸಾಧ್ಯತೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.
ಮೂರು ವರ್ಷದ ಸಾಧನೆ ಬಗ್ಗೆ ಸಿಎಂ ಎಕ್ಸ್ ಪೋಸ್ಟ್: ”ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ” ಎಂದು ಸಿಎಂ ಎಕ್ಸ್ ಪೋಸ್ಟ್ ಮಾಡಿದ್ದಾರೆ.








