ಬೆಂಗಳೂರು:
ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಮೊದಲಾದ ಅನಾಹುತ ಸಂಭವಿಸಿದ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಈ ಜಿಲ್ಲೆಗಳ ವಸ್ತುಸ್ಥಿತಿ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಳೆಯಿಂದಾಗಿ ಈ ಜಿಲ್ಲೆಗಳಲ್ಲಿ ಸಂಭವಿಸಿರುವ ನಷ್ಟದ ಕುರಿತು ಎರಡು ದಿನಗಳೊಳಗಾಗಿ ವರದಿ ಸಲ್ಲಿಸುವಂತೆ ಈ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಕೊಡಗಿನಲ್ಲಿ ವಾಡಿಕೆಗಿಂತ ಶೇ. 175 ರಷ್ಟು, ಉಡುಪಿಯಲ್ಲಿ ಶೇ. 62 ರಷ್ಟು, ಶಿವಮೊಗ್ಗದಲ್ಲಿ ಶೇ. 117 ರಷ್ಟು, ಚಿಕ್ಕಮಗಳೂರಿನಲ್ಲಿ ಶೇ. 170 ರಷ್ಟು, ಹಾಸನದಲ್ಲಿ ಶೇ. 130 ರಷ್ಟು, ಉತ್ತರಕನ್ನಡ ಜಿಲ್ಲೆಯಲ್ಲಿ ಶೇ. 81 ರಷ್ಟು ಹೆಚ್ಚುವರಿ ಮಳೆಯಾಗಿದೆ. ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿಯೇ ವಾಸ್ತವ್ಯ ಹೂಡಿ ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ. 29 ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು 1755 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಹೇಳಿದರು.
ಭಾರೀ ಮಳೆಗೆ ಕೊಡಗಿನಲ್ಲಿ ಇಬ್ಬರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಕೊಡಗಿನಲ್ಲಿ ಮಳೆಯಿಂದಾಗಿ ರಕ್ಷಣೆಗೆ ಸೇನೆಯ ನೆರವು ಪಡೆಯಲಾಗುತ್ತಿದೆ. ಇವರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲು ಯತ್ನಿಸಲಾಯಿತಾದರೂ ಹವಾಮಾನ ವೈಪರೀತ್ಯದಿಂದಾಗಿ ಸಾಧ್ಯವಾಗಿಲ್ಲ. ನಾಳೆ ಬೆಳಿಗ್ಗೆ ಅವರ ರಕ್ಷಣೆಗೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಇವರಿಗೆ ಆಹಾರದ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಮಾರ ಸ್ವಾಮಿ ಹೇಳಿದರು.
ಜಿಲ್ಲಾಧಿಕಾರಿಗಳ ವರದಿ ಆಧರಿಸಿ, ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಬಳಿ 237.55 ಕೋಟಿ ರೂ. ಅನುದಾನ ಲಭ್ಯವಿದ್ದು, ಕೂಡಲೇ ಪರಿಹಾರ ಒದಗಿಸಲು ಯಾವುದೇ ಕೊರತೆ ಇಲ್ಲ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮೊದಲಾದವರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
