ಬೆಂಗಳೂರು:
ಮಹಾಮಳೆ ಹಾಗೂ ಭೂ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಕೊಡಗು ಜಿಲ್ಲೆಯ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.
ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿದ್ದು, ಪ್ರಸ್ತುತ ನಡೆಯುತ್ತಿರುವ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೊಡಗು ಶಿಕ್ಷಕರನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ ಮಹೇಶ್, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಭಾನುವಾರ ಸೇರಿದಂತೆ ಉಳಿದ ರಜೆ ದಿನಗಳಲ್ಲಿ ತರಗತಿ ನಡೆಸಲಾಗುವುದು ಎಂದು ಹೇಳಿದರು.
ಪ್ರವಾಹದಿಂದಾಗಿ ಶಾಲಾ ದಾಖಲಾತಿಗಳನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಂಕಪಟ್ಟಿ, ಮತ್ತಿತರ ದಾಖಲಾತಿಗಳನ್ನು ನೀಡಲಾಗುತ್ತಿದೆ. ಶಾಲಾ, ಕಾಲೇಜುಗಳ ಪುನರ್ ನಿರ್ಮಾಣಕ್ಕಾಗಿ 8 ಕೋಟಿ ರೂಪಾಯಿಗಳ ಅಗತ್ಯವಿದೆ ಎಂದು ಅವರು ತಿಳಿಸಿದರು.
ಪ್ರವಾಹ ಸಂತ್ರಸ್ತರಿಗಾಗಿ ಸಂಗ್ರಹವಾದ ವಿಪತ್ತು ಪರಿಹಾರ ನಿಧಿಯಲ್ಲಿ 4 ಕೋಟಿ ರೂಪಾಯಿ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿದೆ. ಉಳಿದ 4 ಕೋಟಿ ಮೊತ್ತವನ್ನು ಕಾರ್ಪೋರೇಟ್ ಸಂಸ್ಥೆಗಳ ಸಾರ್ವಜನಿಕ ಹೊಣೆಗಾರಿಕೆ ನಿಧಿಯಲ್ಲಿ ಸಂಗ್ರಹಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವರು ಹೇಳಿದರು








