ದಾವಣಗೆರೆ:
ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲಗಳ ಬೆಲೆ ಏರಿಕೆ ವಿರೋಧಿಸಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ವತಿಯಿಂದ ನಾಳೆ (ಸೆ.8ರಂದು) ಇಲ್ಲಿನ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಅಲ್ಲಾವಲಿ ಗಾಜಿಖಾನ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ಪಾಲಿಕೆ ಆವರಣದಲ್ಲಿ ಇಂಧನಗಳ ಬೆಲೆ ಏರಿಕೆಗೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್‍ಎಸ್‍ಯುಐ, ಮಹಿಳಾ ಕಾಂಗ್ರೆಸ್ ಹಾಗೂ ಸೇವಾದಳದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ನಿರಂತರವಾಗಿ ಇಳಿಮುಖ ವಾಗುತ್ತಿದ್ದರೂ ಸಹ ದೇಶದಲ್ಲಿ ಕೇಂದ್ರ ಸರ್ಕಾರ ಪದೇ, ಪದೇ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡುತ್ತಿದೆ. ಇದರಿಂದ ಸರಕು ಸಾಗಾಣಿಕೆ ವೆಚ್ಚವೂ ಹೆಚ್ಚಾಗಿ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಳವಾಗುತ್ತಿದೆ. ಆದ್ದರಿಂದ ಬಡ ಮತ್ತು ಮಧ್ಯಮ ವರ್ಗದ ಜನರ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ. ಅಲ್ಲದೆ, ಆಟೋ ಚಾಲಕರು ಇಂಧನ ವೆಚ್ಚ ಹೆಚ್ಚಾಗಿರುವುದರಿಂದ ಸಮಸ್ಯೆಗೆ ತುತ್ತಾಗಿದ್ದಾರೆ. ಹೀಗಾಗಿ ತಕ್ಷಣವೇ ಕೇಂದ್ರ ಸರ್ಕಾರ ಏರಿಕೆ ಮಾಡಿರುವ ತೈಲ ದರವನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‍ನ ಜಿಲ್ಲಾ ಕಾರ್ಮಿಕ ವಿಭಾಗದ ಅಶ್ರಫ್ ಅಲಿ, ಸಾಧಿಕ್ ಖಾನ್, ಲಿಯಾಕತ್ ಅಲಿ, ಅಬ್ದುಲ್ ಜಬ್ಬಾರ್, ಫಾರೂಕ್ ಮತ್ತಿತರರು ಹಾಜರಿದ್ದರು.