ಬೆಂಗಳೂರು
ವಿಧಾನ ಪರಿಷತ್ ಸಭಾಪತಿ ಆಯ್ಕೆ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಆದ ಅನ್ಯಾಯವನ್ನು ಸಚಿವ ಸಂಪುಟದ ಮೂಲಕ ಸರಿಪಡಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಪಕ್ಷದ ಶಾಸಕರಲ್ಲಿ ಯಾರಿಗೂ ಅಸಮಾಧಾನವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲಾ ಶಾಸಕರು ಬದ್ಧವಾಗಿದ್ದಾರೆ. ಡಿಸೆಂಬರ್ 18ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಸಚಿವ ಸಂಪುಟ ಮತ್ತು ನಿಗಮ ಮಂಡಳಿ ನೇಮಕಾತಿ ಅಂತಿಮಗೊಳಿಸಲಾಗುವುದು ಎಂದರು.
ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರದಿಂದ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅವರು ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ ಎನ್ನುವುದು ಕೇವಲ ವದಂತಿ ಎಂದು ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಡಿ.22 ಕ್ಕೆ ನಿಗದಿಯಾಗಿದೆ. ಆದರೆ ದಿನಾಂಕ ಬದಲಾವಣೆ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ಶಾಸಕಾಂಗ ಸಭೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸುತ್ತಾರೆ ಎಂಬುದರ ಬಗ್ಗೆಯೂ ತಮಗೆ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
