ಹೊನ್ನಾಳಿ:
ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಲಭಿಸುತ್ತದೆ. ತಮ್ಮ ಮಕ್ಕಳನ್ನು ಎಲ್ಲರೂ ಸರಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರಕಾರಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಹೊಳೆ ಮಾದಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡ ಗುರುಮಿಲನ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಪಠ್ಯಪುಸ್ತಕ, ಸಮವಸ್ತ್ರ, ಶೂಗಳು ಸೇರಿದಂತೆ ಎಲ್ಲಾ ಪರಿಕರಗಳನ್ನು ಮಕ್ಕಳಿಗೆ ಉಚಿತವಾಗಿ ವಿತರಿಸಲಾಗುತ್ತಿದೆ. ಮಕ್ಕಳು ಅಪೌಷ್ಟಿಕತೆಯಿಂದ ನರಳಬಾರದು ಎಂಬ ಉದ್ದೇಶದಿಂದ ಹಾಲು, ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದ್ದರಿಂದ, ಎಲ್ಲಾ ಪೋಷಕರೂ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ದಾಖಲು ಮಾಡಬೇಕು ಎಂದು ವಿನಂತಿಸಿದರು.
ಈ ಶಾಲೆಯಲ್ಲಿ ಹಿಂದೆ ಕರ್ತವ್ಯ ನಿರ್ವಹಿಸಿದ ಶಿಕ್ಷಕರನ್ನು ಸನ್ಮಾನಿಸುತ್ತಿರುವುದು ಸಂತಸದ ಸಂಗತಿ. ಗುರುಮಿಲನ ಕಾರ್ಯಕ್ರಮ ಇತರರಿಗೆ ಮಾದರಿಯಾಗುವಂತಿದೆ. ಅದೇ ರೀತಿ ಈ ಶಾಲೆಯಲ್ಲಿ ಓದಿ ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿರುವವರು ಶಾಲೆಯ ಒಳಿತಿಗೆ ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್‍ಡಿಎಂಸಿ ಅಧ್ಯಕ್ಷ ಎಂ.ಆರ್. ನಾಗರಾಜ್, ಶಾಲಾ ಮುಖ್ಯ ಶಿಕ್ಷಕ ಶಿವಪ್ರಸಾದ್‍ಕುಮಾರ್, ಸಹ ಶಿಕ್ಷಕ ನರಸಿಂಹಪ್ಪ ಇತರರು ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಎಚ್. ಕಡದಕಟ್ಟೆ ಗ್ರಾಪಂ ಸದಸ್ಯ ಬಸವರಾಜಪ್ಪ, ಎಸ್‍ಡಿಎಂಸಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಲೋಕೇಶ್ವರಪ್ಪ, ಕಾರ್ಯದರ್ಶಿ ದೊಡ್ಡಪ್ಪ, ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಗ್ರಾಮದ ಮುಖಂಡರಾದ ಬಸಪ್ಪ, ಹನುಮಂತಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಹೊಳೆ ಮಾದಾಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ಶಿಕ್ಷಕರಾದ ಕರಿಬಸಪ್ಪ, ತೀರ್ಥಪ್ಪ, ಹರಳಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಾಲಿ ಮುಖ್ಯ ಶಿಕ್ಷಕ ಒ. ನಾಗರಾಜ್, ಹೊಸಜೋಗ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜಪ್ಪ ಅವರನ್ನು ಸನ್ಮಾನಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ