ಕುಡಿಯುವ ನೀರಿನ ಸಮಸ್ಯೆಗೆ ಮುಂಜಾಗ್ರತಾ ಕ್ರಮ

ಗುಬ್ಬಿ

         ಮುಂಬರುವ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಅನುಸೂಯ ಸೂಚಿಸಿದರು.

         ಪಟ್ಟಣದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವತ್ತ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.

          ಗ್ರಾಮೀಣ ಪ್ರದೇಶಗಳಲ್ಲಿ ಮುಂಬರುವ ಜನವರಿ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು, ಈಗಾಗಲೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಇಇ ಹೆಚ್.ಆರ್.ರಮೇಶ್ ಸಭೆಯ ಗಮನಕ್ಕೆ ತಂದರು. ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮಗಳ ಸಮಗ್ರವಾದ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪ್ರಸ್ತುತ ತಾಲ್ಲೂಕಿನ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ. ಪ್ರತಿ ಗ್ರಾಮಕ್ಕೂ ಈವರೆಗೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

          ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದಾಗಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದೆ ಗ್ರಾಮೀಣ ಭಾಗಗಳಲ್ಲಿ ತೀವ್ರತರ ಸಮಸ್ಯೆ ಎದುರಾಗಿದೆ. ರೈತರ ಕೃಷಿ ಬೆಳೆಗಳು ನೀರಿಲ್ಲದೆ ಒಣಗುವ ಹಂತಕ್ಕೆ ಬಂದಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಂಡು ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವಂತೆ ತಾಲ್ಲೂಕು ಪಂಚಾಯ್ತಿ ಸದಸ್ಯರು ಒತ್ತಾಯಿಸಿದರು.

          ಪರೀಕ್ಷೆಗಳು ಹತ್ತಿರ ಬರುತ್ತಿದ್ದು ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ಮಕ್ಕಳ ಓದಿಗೂ ತೊಂದರೆಯಾಗುತ್ತಿದೆ, ಅಲ್ಲದೆ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಪೂರೈಸಿಕೊಳ್ಳಲು ತೊಂದರೆಯಾಗುತ್ತಿದೆ ಎಂದು ಬೆಸ್ಕಾಂ ಅಧಿಕಾರಿಗಳ ತೀವ್ರ ಬೇಸರ ವ್ಯಕ್ತಪಡಿಸಿದರು.

          ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಕೆ.ಆರ್.ಹೊನ್ನೇಶಪ್ಪ ಮಾತನಾಡಿ, ಅಂಗನವಾಡಿಯಲ್ಲಿ ಯಾವುದೇ ಸಮಸ್ಯೆಗಳು ಇಲ್ಲದಂತೆ ನೋಡಿಕೊಳ್ಳಲಾಗುತ್ತಿದೆ. ಮಾತೃಪೂರ್ಣ ಯೋಜನೆಯು ಸಹ ಯಶಸ್ವಿಯಾಗಿ ನಡೆಯುತ್ತಿದ್ದು ಪ್ರಧಾನಮಂತ್ರಿ ಯೋಜನೆ ಅಡಿಯಲ್ಲಿ ಗರ್ಭಿಣಿ ಸ್ತ್ರೀಯರಿಗೆ 5000 ರೂ. ಹಣವನ್ನು ನೀಡುತ್ತಿದ್ದು ನೇರ ಅವರ ಖಾತೆಗೆ ಹಾಕಲಾಗುತ್ತಿದೆ. ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ 15 ಸಾವಿರ ಫಲಾನುಭವಿಗಳಿಗೆ ಬಾಂಡ್ ತಾಲ್ಲೂಕಿನಲ್ಲಿ ನೀಡಲಾಗಿದೆ. ಇನ್ನೂ 12,500 ಬಾಂಡ್ ವಿತರಣೆ ಮಾಡಬೇಕಾಗಿದೆ ಹಾಗೂ 2500 ಬಾಂಡ್‍ಗಳನ್ನು ಇನ್ನೂ ಮೇಲಾಧಿಕಾರಿಗಳಿಂದ ಬರಬೇಕಾಗಿದೆ ಎಂದು ಮಾಹಿತಿ ನೀಡಿದರು.

          ಕೃಷಿ ಅಭಿಯಾನ ಕಾರ್ಯಕ್ರಮ ಆರಂಭವಾಗುತ್ತಿದ್ದು, ಪ್ರತಿ ಹೋಬಳಿಯಲ್ಲಿಯು ಕಾರ್ಯಕ್ರಮ ಆಯೋಜನೆ ಮಾಡಿ ರೈತರಿಗೆ ಹೆಚ್ಚಿನ ಮಾಹಿತಿ ನೀಡಲಾಗುತ್ತದೆ ಹಾಗೂ ಸರಕಾರದಿಂದ ಬರುವಂತಹ ಯೋಜನೆಗಳ ಬಗ್ಗೆ ಹೋಬಳಿ ಮಟ್ಟದಲ್ಲಿ ತಾಲ್ಲೂಕು ಮಟ್ಟದಲ್ಲಿ ಮಾಹಿತಿಯನ್ನು ನೀಡಲಾಗುತ್ತಿದೆ ಎಂದು ಕೃಷಿ ಇಲಾಖೆ ಅಧಿಕಾರಿ ಮಾಹಿತಿ ತಿಳಿಸಿದರು.

          ಸಭೆಯಲ್ಲಿ ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.ಸಭೆಯಲ್ಲಿ ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಜಿ.ಕಲ್ಪನಾ, ಸ್ಥಾಯಿ ಸಮಿತಿ ಅಧ್ಯಕ್ಷ ಅ.ನಾ.ಲಿಂಗಪ್ಪ, ಕಾರ್ಯನಿರ್ವಹಣಾಧಿಕಾರಿ ನರಸಿಂಹಯ್ಯ ಸೇರಿದಂತೆ ತಾಲ್ಲೂಕು ಪಂಚಾಯ್ತಿ ಸದಸ್ಯರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link