ಚಿತ್ರದುರ್ಗ:
ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಹದಿನೈದು ಲಕ್ಷ ರೂ.ಗಳನ್ನು ಜಮಾ ಮಾಡುವುದಾಗಿ ಚುನಾವಣೆ ಪೂರ್ವದಲ್ಲಿ ದೇಶದ ಜನರಿಗೆ ಆಸೆ ತೋರಿಸಿ ಪ್ರಧಾನಿಯಾಗಿ ನಾಲ್ಕುವರೆ ವರ್ಷಗಳನ್ನು ವಿದೇಶಗಳನ್ನು ಸುತ್ತುವಲ್ಲಿಯೇ ಕಾಲ ಕಳೆದಿರುವ ನರೇಂದ್ರಮೋದಿಗೆ ಮುಂದಿನ ಪಾರ್ಲಿಮೆಂಟ್ ಚುನಾವಣೆಯಲ್ಲಿ ಸೋಲಿಸಿ ರಾಹುಲ್ಗಾಂಧಿರವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ ಜನತೆಯಲ್ಲಿ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಪರ್ಕ ಸಭೆಯಲ್ಲಿ ವಿವಿಧ ಸವಲತ್ತುಗಳಿಗೆ ಅರ್ಜಿ ಸಲ್ಲಿಸಲು ಬಂದಿದ್ದ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಮಾತನಾಡುತ್ತ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರೂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಆಡಳಿತ ನಡೆಸುವಷ್ಟು ಬಹುಮತ ಸಿಗದ ಕಾರಣ ಜೆಡಿಎಸ್.ನೊಂದಿಗೆ ಮೈತ್ರಿ ಮಾಡಿಕೊಂಡಿರುವುದು ಅನಿವಾರ್ಯವಾಗಿದೆ. ಪಂಚರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ.ಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಹಾಗಾಗಿ ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ.ಯನ್ನು ಸೋಲಿಸಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ವಿನಂತಿಸಿದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷ್ ಮಾತನಾಡಿ ಪ್ರತಿವಾರವೂ ಕಾಂಗ್ರೆಸ್ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಿ ರಾಜ್ಯ ಸರ್ಕಾರದಿಂದ ವಿವಿಧ ಸವಲತ್ತುಗಳನ್ನು ಬಯಸಿ ಅರ್ಜಿ ಸಲ್ಲಿಸುವವರನ್ನು ನೇರವಾಗಿ ಸಂಬಂಧಪಟ್ಟ ಕಚೇರಿಗಳಿಗೆ ಕರೆದುಕೊಂಡು ಹೋಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವಲ್ಲಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ವಿಧವಾ ವೇತನ, ವೃದ್ದಾಪ್ಯ ವೇತನ, ರೇಷನ್ ಕಾರ್ಡ್, ಮೆಡಿಕಲ್ ಸರ್ಟಿಫಿಕೇಟ್ ಹೀಗೆ ಹತ್ತು ಹಲವಾರು ಸವಲತ್ತುಗಳಿಗಾಗಿ ಪ್ರತಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯುವ ಜನಸಂಪರ್ಕ ಸಭೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದೆಂದು ಕೋರಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಜ್ಜಪ್ಪ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಜಾನ್ಹವಿ, ಚಾಂದ್ಪೀರ್, ಕಾರ್ಯದರ್ಶಿ ಹೆಚ್.ಶಬ್ಬೀರ್ಭಾಷ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮುಖ್ಯ ಸಂಘಟಕ ಮಹಮದ್ ಅಶ್ರಫ್ಆಲಿ, ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ನ್ಯಾಯವಾದಿ ರವೀಂದ್ರ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ