ಬೆಂಗಳೂರು :
ಕಾಂಗ್ರೆಸ್ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬೆಂಬಲಿತ ಶಾಸಕರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದ ರಮೇಶ್ ಜಾರಕಿಹೊಳಿ ಹಾಗೂ ನಾಗೇಂದ್ರ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಸಚಿವ ಜಮೀರ್ ಅಹ್ಮದ್ ಸಹ ಇದ್ದರು.
ರಮೇಶ್ ಜಾರಕಿಹೊಳಿ ಕಾಂಗ್ರೆಸ್ನ ಅತೃಪ್ತ ಶಾಸಕರ ನೇತೃತ್ವ ವಹಿಸಿಕೊಂಡಿದ್ದರು. ಅಲ್ಲದೆ, ಇತರ ಮೂವರು ಶಾಸಕರೊಂದಿಗೆ ಅವರು ಮುಂಬೈಗೆ ತೆರಳಿ ಬಿಜೆಪಿಯೊಂದಿಗೆ ಸಂಪರ್ಕ ಸಾಧಿಸಿಕೊಂಡಿದ್ದರು ಎನ್ನುವ ಮಾತುಗಳು ಕೇಳಿ ಬಂದಿತ್ತು. ಆದರೆ ಬಳಿಕ ನಾವೆಲ್ಲರೂ ಒಟ್ಟಿಗೆ ಹೋಗಿಲ್ಲ, ಒಟ್ಟಿಗೆ ಇರಲಿಲ್ಲ ಎಂದು ಹೇಳಿಕೆ ನೀಡಿದ್ದರು.
ಮಾಜಿ ಸಿಎಂ ಸಿದ್ದರಾಮಯ್ಯ ಅಧಿವೇಶನಕ್ಕೆ ಹಾಜರಾಗದ ಅತೃಪ್ತ ಶಾಸಕರಿಗೆ ಮೂರು ಬಾರಿ ವಿಪ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ಸೇರಿದಂತೆ ನಾಲ್ವರ ಅನರ್ಹತೆಗೆ ಸಿದ್ದರಾಮಯ್ಯ ಅವರು ಸ್ಪೀಕರ್ ಗೆ ಅರ್ಜಿ ನೀಡಿದ್ದರು. ಆದರೆ ಎಲ್ಲ ಭಿನ್ನಮತೀಯರು ಈಗ ಪಕ್ಷಕ್ಕೆ ವಾಪಸ್ ಆಗಿದ್ದು, ಅನರ್ಹತೆಯ ಅರ್ಜಿ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ