ದಾವಣಗೆರೆ:
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕ ಬೇಡನ್ ಪಾವೆಲ್ ಜನ್ಮ ದಿನಾಚರಣೆ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉತ್ತರ ವಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದಲ್ಲಿ ಆಯೋಜಿಸಿದ್ದ ಮೆರವಣಿಗೆಗೆ ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಇಲ್ಲಿನ ಕಾಯಿಪೇಟೆಯ ಶ್ರೀಬಸವೇಶ್ವರ ಪುತ್ಥಳಿ ಬಳಿಯಲ್ಲಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ, ಮಕ್ಕಳಲ್ಲಿ ಶಿಸ್ತುಬದ್ಧ ಜೀವನ ರೂಪಿಸಲು ಸ್ಕೌಟ್ಸ್ ಅಂಡ್ ಗೈಡ್ಸ್ ಸಹಕಾರಿಯಾಗಿದೆ ಎಂದು ಹೇಳಿದರು.ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯು ಮಕ್ಕಳ ವ್ಯಕ್ತಿತ್ವ ನಿರ್ಮಾಣಕ್ಕೂ ಸಹಕಾರಿಯಾಗಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಈ ಸಂಸ್ಥೆಗೆ ಸೇರಿಸಲು ಮುಂದಾಗಬೇಕು. ಮಕ್ಕಳು ಈ ಸಂಸ್ಥೆಗೆ ಸೇರ್ಪಡೆ ಆಗುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ಸಹ ಅನೇಕ ಸೌಲಭ್ಯಗಳು ದೊರೆಯಲಿದೆ ಎಂದರು.ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯು ಮಕ್ಕಳಲ್ಲಿ ಸಣ್ಣ ವಯಸ್ಸಿನಿಂದಲೇ ದೇಶ ಪ್ರೇಮ, ಮೌಲ್ಯಗಳನ್ನು ಬೆಳೆಸಲಿದೆ. ಈ ಸಂಸ್ಥೆಯ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕೆಂದು ಕರೆ ನೀಡಿದರು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಕೊಟ್ರೇಶ್, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಟಿ.ಪಿ.ಮಲ್ಲಿಕಾರ್ಜುನಪ್ಪ, ಸಂಘಟಕ ಟಿ.ಎಸ್. ಶಿವಣ್ಣ ಮತ್ತಿತರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
