ತುಮಕೂರು
ರೈತರ ಏಳಿಗೆಯೇ ಸಹಕಾರ ಸಂಘಗಳ ಮೂಲ ಉದ್ದೇಶವಾಗಬೇಕೆಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ಹಾಗೂ ಸಹಕಾರ ಇಲಾಖೆಗಳ ಸಹಯೋಗದಲ್ಲಿ ನಗರದ ಸಹಕಾರ ಭವನದಲ್ಲಿಂದು ಜಿಲ್ಲೆಯ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗಾಗಿ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರ ಸಂಘಗಳು ರೈತರು ಆರ್ಥಿಕವಾಗಿ ಮುಂದುವರೆಯುವಂತೆ ಸಾಲ ಸೌಲಭ್ಯ ನೀಡಬೇಕು. ಮಳೆ ಕೊರತೆ, ಬೆಳೆನಷ್ಟಗಳಿಂದ ರೈತ ಸಾಲದ ಬಾಧೆಯನ್ನು ಅನುಭವಿಸುತ್ತಿದ್ದಾನೆ.
ಮಳೆಯನ್ನು ನಂಬಿ ವ್ಯವಸಾಯ ಮಾಡುವ ರೈತ ಆರ್ಥಿಕವಾಗಿ ಕುಗ್ಗುತ್ತಿದ್ದಾನೆ. ಈ ನಿಟ್ಟಿನಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸಹಕಾರ ಸಂಘಗಳು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗುವಂತೆ ಮಾಡಬೇಕು ಎಂದು ಅವರು ತಿಳಿಸಿದರು
ಡಿ.ಸಿ.ಸಿ. ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಮಾತನಾಡಿ ಸಹಕಾರ ಸಂಘಗಳು ಪ್ರಾಮಾಣಿಕವಾಗಿ ನಿಸ್ವಾರ್ಥದಿಂದ ಸೇವೆ ಸಲ್ಲಿಸಬೇಕು. ಸಹಕಾರ ಸಂಘಗಳು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಅವರು ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಎನ್. ಚಂದ್ರಪ್ಪ ಮಾತನಾಡಿ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಆದಾಯ ತೆರಿಗೆ ಮತ್ತು ಜಿ.ಎಸ್.ಟಿ. ನಿಯಮಗಳನ್ನು ಅರಿತು ಸೇವೆ ಸಲ್ಲಿಸಬೇಕು. ಸಾಲ ಮರು ಪಾವತಿಸುವಂತಹ ನೌಕರರಿಗೆ, ಉದ್ಯೋಗಸ್ತರಿಗೆ ಮಾತ್ರ ಸಾಲ ನೀಡಬೇಕೆಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್. ಗಂಗಣ್ಣ ಮಾತನಾಡಿ ನಿರುದ್ಯೋಗಿ ಯುವಕ ಯುವತಿಯರು ಸ್ವಾವಲಂಬನೆಯಿಂದ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ಬ್ಯಾಂಕುಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಹಿಳಾ ಸಹಕಾರ ಬ್ಯಾಂಕ್ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಅನ್ನಪೂರ್ಣಮ್ಮ ವೆಂಕಟನಂಜಪ್ಪ ಅವರಿಗೆ “ಸಹಕಾರ ರತ್ನ ಪ್ರಶಸ್ತಿ” ನೀಡಿ ಸನ್ಮಾನಿಸಲಾಯಿತು.
ಚಾರ್ಟೆಡ್ ಅಕೌಂಟೆಂಟ್ ಅನಿಲ್ ಭಾರಧ್ವಾಜ್, ಸಹಕಾರ ಸಂಘಗಳ ಅಪರ ನಿಬಂಧಕ ಹೆಚ್.ಎಸ್. ನಾಗರಾಜಯ್ಯ ಅವರು ಜಿಎಸ್‍ಟಿ, ಆದಾಯ ತೆರಿಗೆ ಪಾವತಿ ನಿಯಮ ಕುರಿತು ಉಪನ್ಯಾಸ ನೀಡಿದರು.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಿ. ವೆಂಕಟೇಗೌಡ, ಜಿಲ್ಲಾ ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಸಿ.ವಿ. ಮಹಾಲಿಂಗಯ್ಯ, ರಾಜ್ಯ ಸಹಕಾರ ಪತ್ತಿನ ಸಹಕಾರ ಸಂಘಗಳ ಮಹಾ ಮಂಡಳದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಆಶಾಲತಾ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ.ಆರ್. ಸುರೇಶ್, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ನಿರ್ದೇಶಕ ಜಿ. ಮಲ್ಲಿಕಾರ್ಜುನಯ್ಯ, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ವಿ.ಪಿ. ಕಾಂತರಾಜು ಹಾಗೂ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಪದಾಧಿಕಾರಿಗಳು ಹಾಜರಿದ್ದರು.