ಚಳ್ಳಕೆರೆ
ರಾಜ್ಯದಲ್ಲಿ ಕಳೆದ 10 ತಿಂಗಳಿನಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಸರ್ಕಾರ ಆಡಳಿತ ನಡೆಸುತ್ತಿದ್ದು, ಲೋಕಸಭಾ ಚುನಾವಣೆಯಲ್ಲೂ ಸಹ ಮೈತ್ರಿ ಕೂಟದ ಅಭ್ಯರ್ಥಿಗಳನ್ನೇ ಕಣಕ್ಕೀಳಿಸಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲೂ ಸಹ ಜೆಡಿಎಸ್ ಪಕ್ಷದ ಮೈತ್ರಿಯೊಂದಿಗೆ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗುವುದು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯ ಸಿದ್ದತೆಯ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ಅವರು, ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಸಹಯೋಗದಲ್ಲಿ ಪ್ರಚಾರ ಕಾರ್ಯ ಪ್ರಾರಂಭವಾಗಿದೆ. ಚಳ್ಳಕೆರೆ ಕ್ಷೇತ್ರದಲ್ಲೂ ಸಹ ಈಗಾಗಲೇ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಔಪಚಾರಿಕ ಚರ್ಚೆ ನಡೆಸಿದ್ದು, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಿದ ಕೂಡಲೇ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಪ್ರಥಮ ಬಾರಿಗೆ ಸ್ಪರ್ಧಿಸಿದ್ದ ಬಿ.ಎನ್.ಚಂದ್ರಪ್ಪ, ಲಕ್ಷಾಂತರ ಮತಗಳ ಮುನ್ನಡೆಯಲ್ಲಿ ಗೆಲುವು ಸಾಧಿಸಿದ್ದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್‍ನ ಭದ್ರಕೋಟೆಯಾಗಿದ್ದು, ಕಳೆದ ಬಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮತಗಳು ವಿಭಜನೆಯಾಗಿದ್ದು, ಈ ಬಾರಿ ಜೆಡಿಎಸ್ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಬೀಳಲಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಾಂಗ್ರೆಸ್ ಪಕ್ಷದ್ದಾಗಲಿದೆ.
ಕಾರಣ, ಯಾವುದೇ ದೃಷ್ಠಿಯಿಂದಲೂ ಜೆಡಿಎಸ್ ಮತಗಳು ವಿಭಜನೆಯಾಗದೆ ನೇರವಾಗಿ ಕಾಂಗ್ರೆಸ್ ಪಕ್ಷಕ್ಕೆ ಚಲಾವಣೆಯಾಗಲಿದ್ದು, ಇನ್ನೂ ಹೆಚ್ಚಿನ ಅಂತರದಲ್ಲಿ ಗೆಲುವು ಸಾಧಿಸಲಿದ್ಧಾರೆ. ಕಳೆದ ಅವಧಿಯ ನಿರ್ಗಮನ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯನವರ ಪ್ರಗತಿಪರ ಆಡಳಿತ ಅಭಿವೃದ್ಧಿ ಪರ ಚಿಂತನೆ ಪ್ರಸ್ತುತ ಮೈತ್ರಿಕೂಟದ ಮುಖ್ಯಮಂತ್ರಿಯವರ ರೈತರ ಸಾಲ ಮನ್ನಾ ಯೋಜನೆ ಪಕ್ಷದ ಗೆಲುವುವನ್ನು ಖಾತ್ರಿಗೊಳಿಸಿವೆ ಎಂದರು.
ಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಜಂಟಿ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರು ಗೆಲುವು ಸಾಧಿಸುವಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಚಿತ್ರದುರ್ಗ ಲೋಕಸಭಾ ವ್ಯಾಪ್ತಿಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ಆತ್ಮವಿಶ್ವಾಸವನ್ನು ಕೆಲವರು ಹೊಂದಿದ್ಧಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರಧಾನ ಮಂತ್ರಿಯವರ ಸುಳ್ಳು ಭರವಸೆಗಳು ಈಡೇರದೆ ಜನತೆ ನಿರಾಸೆಗೊಂಡಿದ್ದು, ಕಾಂಗ್ರೆಸ್ ಗೆಲುವಿಗೆ ಪರೋಕ್ಷವಾಗಿ ಕಾರಣವಾಗಲಿದೆ ಎಂದಿದ್ದಾರೆ.