ಬಳ್ಳಾರಿ
ಬಳ್ಳಾರಿ ಲೋಕಸಭಾ ಚುನಾವಣೆಯನ್ನು ಅತ್ಯಂತ ಶಾಂತಿಯುತ,ಸುವ್ಯವಸ್ಥಿತವಾಗಿ ಜರುಗಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸಕಲ ಭದ್ರತಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಪೊಲೀಸ್ ಸಂಬಂಧಿತ ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ ಗಮನಕ್ಕೆ ತರುವಂತೆ ಪೊಲೀಸ್ ವೀಕ್ಷಕ ಶರತ್ ಎಂ.ನರ್ವಾಣೆ ಅವರು ಹೇಳಿದರು.
ಬಳ್ಳಾರಿ ಲೋಕಸಭಾ ಚುನಾವಣೆ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಎಲ್ಲ ಚೆಕ್ಪೋಸ್ಟ್ಗಳಿಗೆ ಹಾಗೂ ಮತಗಟ್ಟೆಗಳಿಗೆ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ವಿಶೇಷ ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ.ಭಯಗ್ರಸ್ಥ ಪ್ರದೇಶಗಳ ಜನರಿಗೆ ವಿಶೇಷ ಆತ್ಮಸ್ಥೈರ್ಯ ಮೂಡಿಸಲಾಗಿದೆ ಎಂದು ವಿವರಿಸಿದ ಅವರು, ಏ.23ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಜನರು ಏ.23ರಂದು ಉತ್ಸಾಹದಿಂದ ಬಂದು ಮತಚಲಾಯಿಸಬೇಕು ಎಂದರು.
ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ನಿತೀಶ್, ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳಾದ ಗುಂಜಾನ್ ಆರ್ಯ, ಅಂಶುಕುಮಾರ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.