ಬೆಂಗಳೂರು

ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಶಂಕಾಸ್ಪದ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ನಗರದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಪೊಲೀಸರು ಪ್ರಕರಣಕ್ಕೆ ಬೇಗ ತೆರೆ ಎಳೆಯಬೇಕಾಗಿದೆ ಎಂದು ಒತ್ತಾಯಿಸಿದರು.
ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಸಾವಿನ ಪ್ರಕರಣವನ್ನು ಪಾರದರ್ಶಕ ತನಿಖೆ ನಡೆಸಲು ಮುಂದಾಗಬೇಕಾದ ಪೆÇಲೀಸ್ ಇಲಾಖೆಯ ಅಧಿಕಾರಿಗಳು ನಾನಾ ಸಬೂಬು ಹೇಳುತ್ತಿರುವುದು ಸರಿಯಲ್ಲ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಶೀಘ್ರ ತನಿಖೆ ನಡೆಸಿ ಅವರನ್ನು ಪತ್ತೆ ಹಚ್ಚುವ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು.
ಈ ಘಟನೆಯು ದೆಹಲಿಯ ನಿರ್ಭಯ ಪ್ರಕರಣದಂತೆ ಇದೆ. ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕೊಲೆ ಮಾಡಿರುವ ಸಾಧ್ಯತೆ. ಈ ಪ್ರಕರಣದಿಂದಾಗಿ ರಾಯಚೂರಿನಲ್ಲಿ ಮಹಿಳೆಯರಲ್ಲಿ ಭಯ ಉಂಟಾಗಿದೆ. ಅದಕ್ಕಾಗಿ ಪೊಲೀಸರು ತನಿಖೆ ಮಾಡಿ ಈ ಪ್ರಕರಣ ಭೇದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯ ಮಾಡಿದರು.
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯ ಭಾವನೆ ತಾಳಿದ್ದೇ ಆದರೆ ಜಿಲ್ಲಾದ್ಯಂತ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಪ್ರತಿಭಟನೆ ನಿರತರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ ಕಾರ್ಯದರ್ಶಿ ಎ.ಶಾಂತಾ, ವಿದ್ಯಾರ್ಥಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








