ಹಾವೇರಿ
ಜಿಲ್ಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ನೀಡಲು ಆದ್ಯತೆಯ ಕೆಲಸವಾಗಿ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಜರುಗಿದ ಬರಪರಿಸ್ಥಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದು ನೀರು ಪೂರೈಸಬೇಕು ಹಾಗೂ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಆಯಾ ತಾಲೂಕಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸದಾ ನಿಗಾವಹಿಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರು ಪೂರೈಕೆಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಬಿಡುಗಡೆ ಮಾಡಿದ ನೀರನ್ನು ಕೃಷಿ ಬಳಕೆಗೆ ಉಪಯೋಗಿಸದಂತೆ ಎಚ್ಚರವಹಿಸಬೇಕು ಹಾಗೂ ನದಿಪಾತ್ರದ ಪಂಪಸೆಟ್‍ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಮಳೆಗಾಲ ಪ್ರಾರಂಭವಾಗುವವರೆಗೆ ಜಿಲ್ಲೆಯಲ್ಲಿ ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪಶು ಪಾಲನಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಬರಪರಿಸ್ಥಿತಿಯಲ್ಲಿ ಕೂಲಿಕಾರರಿಗೆ ಉದ್ಯೋಗ ಅರಿಸಿ ಗುಳೆ ಹೋಗುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚು ಹೆಚ್ಚು ಕಾಮಗಾರಿಗಳನ್ನು ಸೃಜಿಸಿ ಕೂಲಿಕಾರರಿಗೆ ಉದ್ಯೋಗ ಒದಗಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಮೇವಿನ ಸಮಸ್ಯೆ ಕುರಿತಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಸಹಾಯವಾಣಿ 1077 (08375-249102) ಹಗಲು ಮತ್ತು ರಾತ್ರಿ ಸಹಾಯಣಿ ತೆರೆಯಲಾಗಿದೆ. ತಾಲೂಕು ಮಟ್ಟದಲ್ಲಿ ಸಹ ಸಹಾಯವಾಣಿ ಆರಂಭಿಸಲಾಗಿದೆ. ಇದೇ ರೀತಿಯಲ್ಲಿ ಜಿಲ್ಲೆಯ ಎಲ್ಲ ತಾಲೂಕು ಪಂಚಾಯತಿಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಸಹ ಸಹಾಯವಾಣಿ ತೆರೆಯಬೇಕು ಎಂದು ಸೂಚನೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜನೀಯರ್ ವಿನಾಯಕ್ ಹುಲ್ಲೂರ ಅವರು ಮಾತನಾಡಿ, ಜಿಲ್ಲೆಯಲ್ಲಿ 205 ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ. 57 ಗ್ರಾಮಗಳಲ್ಲಿ 116 ಖಾಸಗಿ ಕೊಳವೆಬಾವಿಗಳನ್ನು ಒಪ್ಪಂದದ ಆಧಾರದ ಮೇಲೆ ಪಡೆಯಲಾಗಿದೆ. ಅಗತ್ಯಕ್ಕೆ ತಕ್ಕಂತೆ ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ವಿವರಿಸಿದರು.
ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ 85, ಹಾನಗಲ್-126, ಹಾವೇರಿ -108, ಹಿರೇಕೆರೂರು-125, ರಾಣೇಬೆನ್ನೂರು-143, ಸವಣೂರು-63 ಹಾಗೂ ಶಿಗ್ಗಾಂವ ತಾಲೂಕಿನಲ್ಲಿ 82 ಗ್ರಾಮಗಳು ಸೇರಿ 732 ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ ಹಾನಗಲ್ ತಾಲೂಕಿನ ಎರಡು, ಹಾವೇರಿ, ರಾಣೇಬೆನ್ನೂರು ಹಾಗೂ ಸವಣೂರ ತಾಲೂಕಿನ ತಲಾ ಒಂದು ಶುದ್ಧ ನೀರಿನ ಘಟಕ ಸೇರಿ ಐದು ಘಟಕಗಳು ದುರಸ್ತಿಯಲ್ಲಿವೆ ಎಂದು ಹೇಳಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮಾತನಾಡಿ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿಲ್ಲ ಹಾಗೂ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆದಿರುವುದಿಲ್ಲ. ಮುಂಬರುವ ದಿನಗಳಲ್ಲಿ ಅಂತಹ ಸಮಸ್ಯೆಗಳು ಉದ್ಭವಿಸಿದಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ನಗರ/ಪಟ್ಟಣ ಪ್ರದೇಶಗಳಲ್ಲಿ 2018-19ನೇ ಸಾಲಿನಲ್ಲಿ ಎಸ್.ಎಫ್.ಸಿ. ಅನುದಾನದಲ್ಲಿ ರೂ.180 ಲಕ್ಷ ಅನುದಾನ ಬಿಡುಗಡೆಯಾಗಿದ್ದು, 54 ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 3.26 ಲಕ್ಷ ಮೆಟ್ರಿಕ್ ಟನ್ ಮೇವು 25 ವಾರಗಳಿಗೆ ಸಾಕಾಗುಷ್ಟು ದಾಸ್ತಾನು ಇದೆ. ಸಾಕಷ್ಟು ಪ್ರಮಾಣದಲ್ಲಿ ಮೇವು ಲಭ್ಯವಿರುವುದರಿಂದ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ಆರಂಬಿಸುವುದು ಸದ್ಯ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಕಂಡುಬಂದರೆ ಮೇವು ಬ್ಯಾಂಕ್‍ಗಳನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸಲಾಗಿದೆ ಎಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.