ದೆಹಲಿ:
ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಪ್ರದರ್ಶನದಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದರು. ಆದರೆ ಕಾರ್ಯಕಾರಿಣಿ ಸದಸ್ಯರು ರಾಜೀನಾಮೆಯನ್ನು ತಿರಸ್ಕರಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ನಡೆದಿದ್ದು,ಈ ಸಂದರ್ಭದಲ್ಲಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜೀನಾಮೆಗೆ ಮುಂದಾಗಿದ್ದರು.
‘ಪಕ್ಷದ ಅಧ್ಯಕ್ಷ ಸ್ಥಾನ ನೆಹರೂ ಕುಟುಂಬದ ಹೊರತಾಗಿರಬೇಕು. ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ಅವರ ಹೆಸರೂ ಪ್ರಸ್ತಾಪ ಬೇಡ’ ಎಂದು ಸಭೆಯಲ್ಲಿ ಅಧ್ಯಕ್ಷ ರಾಹುಲ್ ಗಾಂಧಿ ಇಂಗಿತ ವ್ಯಕ್ತಪಡಿದರು. ಆದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಅವರ ರಾಜೀನಾಮೆ ಪ್ರಸ್ತಾಪವನ್ನು ಸಭೆಯಲ್ಲಿದ್ದ ನಾಯಕರು ಸರ್ವಾನುಮತದಿಂದ ತಿರಸ್ಕರಿಸಿದ್ದೇವೆ ಎಂದು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ಸ್ಪಷ್ಟಪಡಿಸಿದ್ದಾರೆ.
ಪಕ್ಷಕ್ಕೆ ರಾಹುಲ್ ಗಾಂಧಿ ಅವರ ಅನಿವಾರ್ಯತೆ ಮತ್ತು ಮಾರ್ಗದರ್ಶನದ ಅಗತ್ಯ ಇದೆ. ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಪಕ್ಷ ಸಂಘಟನೆಗೆ ರಾಹುಲ್ಗೆ ಹೆಚ್ಚಿನ ಅಧಿಕಾರ ನೀಡಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್, ಪ್ರಿಯಾಂಕಾ ವಾದ್ರಾ, ಜ್ಯೋತಿರಾಧಿತ್ಯ ಸಿಂಧಿಯಾ, ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಶೀಲಾ ದೀಕ್ಷಿತ್ ಮುಂತಾದವರು ಭಾಗಿಯಾಗಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ