ಬೆಳಗಾವಿ:
ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರುವುದಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಜೀನಾಮೆ ನೀಡದಂತೆ ನಾವು ಒತ್ತಾಯಿಸಿ ಕಳುಹಿಸಿದ್ದೇವೆ. ಅವರು ನಮ್ಮ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿ ಎಂಬುದು ನಮ್ಮೆಲ್ಲರ ಆಸೆಯಾಗಿದೆ ಎಂದಿದ್ದಾರೆ.
ಹಾಗೂ ನೂತನ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸುರೇಶ್ ಅಂಗಡಿಯವರಿಗೆ ಅಭಿನಂದನೆಗಳು. ಸುರೇಶ ಅಂಗಡಿಯವರ ಮೇಲಿನ ನಿರೀಕ್ಷೆಗಳು ಹೆಚ್ಚಾಗಿದೆ. ಅಭಿವೃದ್ದಿಯ ಕೆಲಸ ಮಾಡಲಿ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ನಡೆದ ಪಕ್ಷದ ಸಿಡಬ್ಲೂಸಿ ಸಭೆಯಲ್ಲಿ ರಾಜೀನಾಮೆ ಬಗ್ಗೆ ಪ್ರಸ್ತಾಪ ಮಾಡಿದ್ದರು. ಈ ಸಭೆಗೆ ದೇಶದ ಎಲ್ಲಾ ರಾಜ್ಯಗಳ ನಾಯಕರು ಕೂಡ ಸಭೆಗೆ ಹಾಜರಾಗಿದ್ದು, ಈ ಸಭೆಯ ಆರಂಭದಲ್ಲೇ ರಾಹುಲ್ ರಾಜೀನಾಮೆ ನೀಡುವುದಾಗಿ ಹೇಳಿದ್ದರು
ಈಗಾಗಲೇ ಕಾಂಗ್ರೆಸ್ ಪಕ್ಷದ ಮೂವರು ರಾಜ್ಯಾಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್ ಮೇಲಿನ ಒತ್ತಡ ಹೆಚ್ಚಾಗಲು ಕಾರಣವಾಗಿದೆ. ಇತ್ತ ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರು ಕೂಡ ರಾಜೀನಾಮೆಗೆ ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ಅವರೇ ಸಿಎಂ ಅವರಿಗೆ ಕರೆ ಮಾಡಿ ರಾಜೀನಾಮೆ ನೀಡದಂತೆ ಮನವೊಲಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
