ದಾವಣಗೆರೆ
ಜಿಲ್ಲೆಯ ಒಟ್ಟು 10 ಪರೀಕ್ಷಾ ಕೇಂದ್ರಗಳಲ್ಲಿ ಜೂ.11 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಸುವ್ಯವಸ್ಥಿತ ಮತ್ತು ಶಾಂತಿಯುತ ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ 2019 ರಲ್ಲಿ ನಡೆಯುವ ಪಿಯುಸಿ ಪೂರಕ ಪರೀಕ್ಷೆಯ ಕುರಿತ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ದಾವಣಗೆರೆ ತಾಲ್ಲೂಕಿನ 4 ಕೇಂದ್ರಗಳು, ಹರಿಹರ ತಾಲ್ಲೂಕಿನ 01 ಕೇಂದ್ರ, ಜಗಳೂರು ತಾಲ್ಲೂಕಿನ 01 ಕೇಂದ್ರ, ಚನ್ನಗಿರಿ ತಾಲ್ಲೂಕಿನ 01 ಕೇಂದ್ರ ಹೊನ್ನಾಳಿ ತಾಲ್ಲೂಕಿನ 01 ಕೇಂದ್ರ ಮತ್ತು ಹರಪನಹಳ್ಳಿ ತಾಲ್ಲೂಕಿನ 02 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ವಿದ್ಯಾರ್ಥಿಗಳಿಗೆ ಸೂಕ್ತ ಆಸನಗಳ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು ಸೇರಿದಂತೆ ಮೂಲಭೂತ ವ್ಯವಸ್ಥೆ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು. ಕೈಗಡಿಯಾರ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅಧಿಕಾರಿಗಳು ಪರೀಕ್ಷಾ ಪೂರ್ವ ಮತ್ತು ಪರೀಕ್ಷಾ ನಂತರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ವ್ಯಾಪ್ತಿಯ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ಆಗದಂತೆ ಹಾಗೂ ಶಾಂತಿಯುತವಾಗಿ ಪರೀಕ್ಷೆ ನಡೆಸಲು ಅಗತ್ಯವಾದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಡಿಡಿಪಿಯು ಸಾವಿತ್ರಮ್ಮ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 4844 ಬಾಲಕರು, 3876 ಬಾಲಕಿಯರು ಸೇರಿದಂತೆ ಒಟ್ಟು 8720 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಿಂದ 2005 ಬಾಲಕರು, 1345 ಬಾಲಕಿಯರು ಒಟ್ಟು 3042 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 1152 ಬಾಲಕರು, 1554 ಬಾಲಕಿಯರು ಒಟ್ಟು 2978 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 1415 ಬಾಲಕರು, 924 ಬಾಲಕಿಯರು ಒಟ್ಟು 2339 ವಿದ್ಯಾರ್ಥಿಗಳು ಜಿಲ್ಲೆಯ 10 ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವರು.
ಪರೀಕ್ಷಾ ಕೊಠಡಿಯಲ್ಲಿ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್‍ಗಳನ್ನು ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಡ್ಡಾಯವಾಗಿ ತರದಂತೆ ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಅಕ್ರಮ ಮತ್ತು ಉತ್ತೇಜನ ನೀಡುವಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಗುವುದು ಎಂದರು.
ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿಯು ಕಡ್ಡಾಯವಾಗಿ ಗುರುತಿನ ಪತ್ರವನ್ನು ಧರಿಸಬೇಕು. ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಕ್ಕೆ ತರಬೇಕು ಎಂದರು ಸಭೆಯಲ್ಲಿ ಜಿಲ್ಲೆಯ ತಾಲ್ಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಜರಿದ್ದರು.