ಚಿತ್ರದುರ್ಗ
ಭದ್ರಾ ನೀರಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುವ ಬರದ ನಾಡು ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ಜುಲೈ 30 ರಂದು ನೀರು ಹರಿಸುವುದು ಖಚಿತ ಎಂದು ಕಾರ್ಮಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟರಮಣಪ್ಪ ಅವರು ಹೇಳಿದರು.
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ವತಿಯಿಂದ ಕೈಗೊಂಡಿರುವ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳ ವಾಸ್ತವಿಕ ಸ್ಥಿತಿ-ಗತಿ ಪರಿಶೀಲನೆಗಾಗಿ ಬುಧವಾರದಂದು ಭದ್ರಾ ಮೇಲ್ದಂಡೆ ಯೋಜನೆಯ ಅಜ್ಜಂಪುರ ಸುರಂಗ ಕಾಲುವೆ ಪ್ರದೇಶ, ತರೀಕೆರೆ ಬಳಿಯ ಪಂಪ್‍ಹೌಸ್-2, ಪಂಪ್‍ಹೌಸ್-01, ಹಾಗೂ ಲಕ್ಕವಳ್ಳಿ ಬಳಿಯ ಭದ್ರಾ ಜಲಾಶಯ ಬಳಿಯ ಇನ್‍ಟೇಕ್ ಕಾಲುವೆ ಕಾಮಗಾರಿ ವೀಕ್ಷಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಭದ್ರಾ ಜಲಾಶಯದಿಂದ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ನೀರು ಹರಿಯಲು ಇದ್ದಂತಹ ಎಲ್ಲ ಅಡ್ಡಿ ಆತಂಕವನ್ನು ನಿವಾರಿಸಲಾಗಿದೆ. ಭದ್ರಾ ಜಲಾಶಯದಿಂದ ಜುಲೈ 30 ರಂದು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸುವುದು ಖಚಿತ ಎಂದರು
ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.9 ಟಿ.ಎಂ.ಸಿ. ನೀರು ಹಂಚಿಕೆಯಾಗಿದ್ದು, ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ದು, ಇಲ್ಲಿಂದ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆ ಮೂಲಕ ನೀರು ಹರಿಸುವುದು ಯೋಜನೆಯ ಪ್ರಮುಖ ಅಂಶವಾಗಿದೆ.
ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಮೂಲಕ ರೈತರ ಹಿತಕಾಯುವುದು ಇದಲ್ಲದೆ, ನಾಲ್ಕೂ ಜಿಲ್ಲೆಗಳ ಒಟ್ಟು 367 ಕೆರೆಗಳನ್ನು ತುಂಬಿಸುವ ಮಹತ್ವದ ಕಾರ್ಯ ಕೈಗೊಳ್ಳಲಾಗುತ್ತಿದೆ.
ಭದ್ರಾ ಮೇಲ್ದಂಡೆ ಯೋಜನೆಯಡಿ ವಾಣಿ ವಿಲಾಸಸಾಗರ ಜಲಾಶಯಕ್ಕೆ ನೀರು ಹರಿಸಲು ಅಗತ್ಯವಿರುವ ಕಾಮಗಾರಿ ಬಹುತೇಕ ಪೂರ್ಣಗೊಳ್ಳುವ ಹಂತ ತಲುಪಿದ್ದು, ವಾಣಿ ವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸಲು ಇದ್ದ ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಲಾಗಿದೆ. ಅಜ್ಜಂಪುರ ಬಳಿಯ ರೈಲ್ವೆ ಸೇತುವೆ ಬಳಿಯ ಕಾಮಗಾರಿ ಬಾಕಿ ಹಾಗೂ ಅಬ್ಬಿನಹೊಳಲು ಗ್ರಾಮದಲ್ಲಿ ಕೆಲ ರೈತರು ಭೂ ಪರಿಹಾರ ದರ ನಿಗದಿ ಕುರಿತು ತಕರಾರು ತೆಗೆದಿರುವುದಕ್ಕೆ ಸಂಬಂಧಿಸಿದಂತೆ ಈಗಾಗಲೆ ಇದಕ್ಕೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲಾಗಿದೆ.
ಈ ಎರಡೂ ಕಡೆಗಳಲ್ಲಿ ತಾತ್ಕಾಲಿಕವಾಗಿ ಬೃಹತ್ ಪೈಪ್ ಅಳವಡಿಸಿ ನೀರು ಹರಿಯುವಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕಾಗಿ ಈಗಾಗಲೆ ಚೆನ್ನೈನಿಂದ ಪೈಪ್‍ಗಳನ್ನು ಖರೀದಿಸಿ ತರಿಸಲಾಗುತ್ತಿದೆ. ಹೀಗಾಗಿ ಭದ್ರಾ ಜಲಾಶಯದಿಂದ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ನೀರು ಹರಿಯಲು ಇದ್ದಂತಹ ಎಲ್ಲ ಅಡ್ಡಿ ಆತಂಕವನ್ನು ನಿವಾರಿಸಿದಂತಾಗಿದೆ. ಭದ್ರಾ ಜಲಾಶಯದಿಂದ ಜುಲೈ 30 ರಂದು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ನೀರು ಹರಿಸುವುದು ಖಚಿv ಎಂದು ಸಚಿವರು ಪುನರುಚ್ಚರಿಸಿದರು.
ಹಿರಿಯೂರಿನಲ್ಲಿ ವಾಣಿ ವಿಲಾಸ ಸಾಗರ ಜಲಾಶಯ ಡೆಡ್ ಸ್ಟೋರೇಜ್ ಇದ್ದರೂ ನೀರು ಬಳಸಲಾಗುತ್ತಿದೆ ಎಂದು ಹೇಳುತ್ತಿರುವುದು ಸರಿಯಲ್ಲ, ಅಧಿಕಾರಿಗಳು ಎಲ್ಲ ಅಂಶಗಳನ್ನು ಪರಿಗಣಿಸಿಯೇ ನೀರು ಬಳಸಲಾಗುತ್ತಿದೆ ಎಂದು ಈಗಾಗಲೆ ಸ್ಪಷ್ಟನೆ ನೀಡಿದ್ದಾರೆ. ಆದಾಗ್ಯೂ ಭದ್ರಾ ನೀರನ್ನು ಜು. 30 ಕ್ಕೆ ಹರಿಸಿದಲ್ಲಿ, ಸಮಸ್ಯೆ ಬಗೆಹರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಅವರು ಹೇಳಿದರು.
ಚಳ್ಳಕೆರೆ ಶಾಸಕ ರಘುಮೂರ್ತಿ ಅವರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಬುಧವಾರದಂದು ವಾಣಿವಿಲಾಸ ಸಾಗರ ಜಲಾಶಯಕ್ಕೆ ಭೇಟಿ ನೀಡಿ, ವಾಸ್ತವ ಸ್ಥಿತಿ ಪರಿಶೀಲಿಸಿದ್ದಾರೆ. ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಜುಲೈ 30 ಕ್ಕೆ ಭದ್ರೆ ನೀರು ಜಲಾಶಯಕ್ಕೆ ಹರಿಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ, ಭದ್ರಾ ಮೇಲ್ದಂಡೆ ಯೋಜನೆಯ ಅಧೀಕ್ಷಕ ಅಭಿಯಂತರರುಗಳಾದ ವೇಣುಗೋಪಾಲ್, ಎಸ್.ಎಸ್. ಪಾಳೇಗಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.