ಹಾವೇರಿ
ಮಳೆಗಾಲ ಆರಂಭಗೊಂಡಿದೆ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಲು, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯವಾಗಿದೆ. ಪ್ರತಿಯೊಬ್ಬರೂ ಸೊಳ್ಳೆಗಳ ನಿಯಂತ್ರಣ ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನೆಹರು ಓಲೇಕಾರ ಅವರು ಹೇಳಿದರು
ಮಲೇರಿಯಾ ನಿಯಂತ್ರಣ ಜಾಗೃತಿಗಾಗಿ ಶುಕ್ರವಾರ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಧಿಕಾರಿಗಳ ಇವರ ಸಂಯುಕ್ತ ಆಶ್ರಯದಲ್ಲಿ “ಶೂನ್ಯ ಮಲೇರಿಯ ನನ್ನಿಂದ ಪ್ರಾರಂಭ” ಎಂಬ ಘೋಷ ವಾಕ್ಯದೊಂದಿಗೆ ಆಯೋಜಿಸಲಾದ ಮಲೇರಿಯಾ ವಿರೋಧಿ ಮಾಸಚಾರಣೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮನುಷ್ಯನಿಗೆ ಆರೋಗ್ಯವೇ ಭಾಗ್ಯ, ನಮ್ಮ ಆರೋಗ್ಯ ಚೆನ್ನಾಗಿರಬೇಕೇಂದೆರೆ ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟು ಕೊಳ್ಳಬೇಕು. ವಾತಾವರಣ ಸ್ವಚ್ಛವಿಲ್ಲದಿದ್ದಾಗ ಸೊಳ್ಳೆಗಳ ಉತ್ಪಾದನೆ ಹೆಚ್ಚಾಗಿ ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ಎಚ್ಚರಿಸಿದರು.
ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮಲೇರಿಯಾ ನಿಯಂತ್ರಣ ಜಾಗೃತಿ ನಾಮಫಲಕಗಳೊಂದಿಗೆ ಘೋಷವಾಕ್ಯಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು .ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಚ್.ಎಸ್.ರಾಘವೇಂದ್ರಸ್ವಾಮಿ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಾಗರಾಜ ನಾಯಕ್, ತಾಲೂಕ ಆರೋಗ್ಯಧಿಕಾರಿ ಡಾ. ಪ್ರಭಾಕರ ಕುಂದೂರು, ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಇತರೆ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.