ಹಾವೇರಿ
ಗಂಗಾ ಕಲ್ಯಾಣ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬಾಕಿ ಇರುವ ಕಾಮಗಾರಿಗಳನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದಡಿ ಅಲ್ಪಸಂಖ್ಯಾತ ವರ್ಗಕ್ಕೆ ಕಲ್ಪಿಸಿರುವ ಸೌಕರ್ಯಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಗಂಗಾಕಲ್ಯಾಣದಡಿ ಬಾಕಿ ಉಳಿದಿರುವ 113 ಕೊಳವೆಬಾವಿಗಳಿಗೆ ನಿಗಧಿತ ಶುಲ್ಕ ಪಾವತಿಸಿ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಉರ್ದು ಶಾಲೆಗಳಿಗೆ ಹಾಗೂ ಮೌಲಾನಾ ಆಜಾದ್ ಶಾಲೆಗಳಿಗೆ ಬೇಕಾಗಿರುವ ನಿವೇಶನ ಕುರಿತಂತೆ ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಧಾನ ಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಯಡಿ 70 ಉರ್ದು ಶಾಲಾ ಕೊಠಡಿಗಳು ಕಳೆದ ಸಾಲಿನಲ್ಲಿ ಮಂಜೂರಾಗಿದ್ದು, ಈ ಪೈಕಿ 64 ಕೊಠಡಿಗಳು ಪೂರ್ಣಗೊಂಡಿವೆ. ಉಳಿದ ಆರು ಕೊಠಡಿಗಳಿಗೆ ನಿವೇಶನ ಸಮಸ್ಯೆ ಇದೆ. 14 ಮೌಲಾನಾ ಆಜಾದ್ ಶಾಲೆಗಳಿಗೆ ಕೊಠಡಿ ನಿರ್ಮಾಣಕ್ಕೆ ಮಂಜೂರಾಗಿದ್ದು, ಈ ಪೈಕಿ ಎರಡು ಶಾಲೆಗಳ ಕೊಠಡಿಗಳ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಎದುರಾಗಿರುವ ಕುರಿತಂತೆ ಸಭೆಯ ಗಮನಸೆಳೆದರು.
ಜಿಲ್ಲೆಯಲ್ಲಿರುವ ಉರ್ದು ಶಾಲೆಗಳಿಗೆ ಕಾಂಪೌಂಡ ನಿರ್ಮಾಣ ಮಾಡಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಸಮಿತಿಯ ಅಧಿಕಾರೇತರ ಸದಸ್ಯರಾದ ಹಾನಗಲ್ನ ಬಾಬುಜಾನ್ ಅವರು ಸಭೆಯ ಗಮನ ಸೆಳೆದರು. ಇವರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿರುವ ಉರ್ದು ಶಾಲೆಗಳ ಪೈಕಿ ಯಾವ ಯಾವ ಶಾಲೆಗಳಿಗೆ ಕಾಂಪೌಂಡ್ ಇಲ್ಲ ಎಂಬುದರ ಮಾಹಿತಿ ಸಂಗ್ರಹಿಸಿ ಕಾಂಪೌಂಡ ಅಗತ್ಯವಿರುವ ಶಾಲೆಗಳಿಗೆ ಆದ್ಯತೆ ಮೇರೆಗೆ ಕಾಂಪೌಂಡ ನಿರ್ಮಾಣಕ್ಕೆ ಕ್ರಮವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಅಂಗನವಾಡಿಯಲ್ಲಿ ಕಲಿಯುತ್ತಿರುವ ಅಲ್ಪಸಂಖ್ಯಾತ ವರ್ಗದ ಮಕ್ಕಳ ಪೈಕಿ ಅಪೌಷ್ಠಿಕತೆ ಎದುರಿಸುತ್ತಿರುವ ಮಕ್ಕಳಿಗೆ ಮೊಟ್ಟೆ, ಹಾಲು ಸೇರಿದಂತೆ ಪೌಷ್ಠಿಕ ಆಹಾರ ನೀಡಲು ಕ್ರಮ ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ವ ಉದ್ಯೋಗ ಒಳಗೊಂಡಂತೆ ಸರ್ಕಾರದ ಸಹಾಯಧನ ಹಾಗೂ ಬ್ಯಾಂಕ್ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸಿದ ಅಲ್ಪಸಂಖ್ಯಾತ ವರ್ಗಗಳಿಗೆ ಯಾವುದೇ ವಿಳಂಬ ಮತ್ತು ಸಕಾರಣವಿಲ್ಲದೆ ಬ್ಯಾಂಕ್ಗಳು ಸಾಲ ನಿಕಾರಕರಿಸಿದ ನಿರ್ಧಿಷ್ಟ ಪ್ರಸಂಗವಿದ್ದರೆ ನನ್ನ ಗಮನಕ್ಕೆ ತನ್ನಿ. ಈ ಕುರಿತಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಅಧಿಕಾರೇತರ ಸದಸ್ಯರಿಗೆ ಸಲಹೆ ನೀಡಿದರು.
ವಿವಿಧ ಗ್ರಾಮೀಣ ವಸತಿ ಯೋಜನೆಯಡಿ 183 ಮನೆಗಳ ನಿರ್ಮಾಣ ಗುರಿ ಹೊಂದಲಾಗಿದೆ. ಅಲ್ಪಸಂಖ್ಯಾತ ವರ್ಗದವರು ಹೆಚ್ಚಾಗಿರುವ ಸವಣೂರ ತಾಲೂಕಿಗೆ ಹೆಚ್ಚುವರಿ ಮನೆ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನು ಹೊರತುಪಡಿಸಿ ಅಲ್ಪಸಂಖ್ಯಾತ ವರ್ಗಕ್ಕೆ ಹೆಚ್ಚುವರಿಯಾಗಿ ಮನೆಗಳ ಅವಶ್ಯಕತೆ ಇದ್ದರೆ ವರದಿ ತರಿಸಿ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಕೆ.ಲೀಲಾವತಿ ಅವರು ತಿಳಿಸಿದರು.
ನಗರ ಮತ್ತು ಗ್ರಾಮೀಣ ಅಲ್ಪಸಂಖ್ಯಾತ ವರ್ಗದವರಿಗೆ ನಿಗಧಿತ ಕೋಟಾ ಹೊರತುಪಡಿಸಿ ಸಾಮಾನ್ಯ ವರ್ಗದಲ್ಲೂ ಪರಿಗಣಿಸಬೇಕು. ಅತೀ ಹೆಚ್ಚು ಅಲ್ಪಸಂಖ್ಯಾತರು ವಾಸಿಸುವ ಪ್ರದೇಶದಲ್ಲಿ ಹೆಚ್ಚುವರಿ ಮನೆಗಳ ಮಂಜೂರಾತಿ ಅವಶ್ಯಕತೆ ಇದ್ದರೆ ಸರ್ಕಾರಕ್ಕೆ ವಿಶೇಷ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆಯಲ್ಲಿ ಕೃಷಿ ಯಾಂತ್ರಿಕರಣ ಯೋಜನೆ, ಸೂಕ್ಷ್ಮ ನೀರಾವರಿ ಯೋಜನೆ, ನೂತನ ಕೃಷಿ ಉತ್ತೇಜನ ಯೋಜನೆ, ಕೃಷಿ ಭಾಗ್ಯ ಯೋಜನೆಯಡಿ ಅಲ್ಪಸಂಖ್ಯಾತರ ವರ್ಗಗಳಿಗೆ ಜಿಲ್ಲೆಯಲ್ಲಿ ಬಿಡುಗಡೆಯಾದ ಅನುದಾನದ ಪೈಕಿ ಶೇ.15 ರಷ್ಟು ಅನುದಾನವನ್ನು ಬಳಕೆಮಾಡಬೇಕು. ಆದರೆ ಅಲ್ಪಸಂಖ್ಯಾತ ಹಿಡುವಳಿದಾರರ ಸಂಖ್ಯೆ ಕಡಿಮೆ ಇರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಅರ್ಜಿಗಳು ಬರುವುದಿಲ್ಲ ಎಂದು ಕೃಷಿ ಜಂಟಿ ನಿರ್ದೇಶಕರು ಸಭೆಯ ಗಮನಕ್ಕೆ ತಂದರು.
ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಯಡಿ ಅಲ್ಪಸಂಖ್ಯಾತ ವರ್ಗದವರಿಗೆ ಸರ್ಕಾರದ ಸೌಲಭ್ಯಗಳ ಕುರಿತಂತೆ ಹೆಚ್ಚಿನ ಪ್ರಚಾರ ಅಗತ್ಯವಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣ, ವಿಡಿಯೋ ಪ್ರದರ್ಶನ, ಪ್ರತಿ ಗ್ರಾಮದಲ್ಲೂ ಮಾಹಿತಿ ನೀಡುವ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಮೀನುಗಾರಿಕೆ ಇಲಾಖೆ ವತಿಯಿಂದ ಅಲ್ಪಸಂಖ್ಯಾತ ವರ್ಗಕ್ಕೆ ಮೀನುಗಾರಿಕೆಗಾಗಿ ಪಾಂಡ್ಗಳ ನಿರ್ಮಾಣಕ್ಕೆ ಹಣಕಾಸಿನ ನೆರವು ಹಾಗೂ ನಗರದಲ್ಲಿ ಮೀನು ಮಾರುಕಟ್ಟೆ ನಿರ್ಮಿಸಲು ನಿವೇಶನ ಕುರಿತಂತೆ ಪ್ರಸ್ತಾವನೆಯನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಸೂಚನೆ ನೀಡಿದರು.
ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಕುರಿತಂತೆ ಉದ್ಯೋಗ ವಿನಿಮಯ ಕಚೇರಿಯಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಉದ್ಯೋಗ ಮೇಳ ಆಯೋಜಿಸಬೇಕು. ಈ ಕುರಿತಂತೆ ವ್ಯಾಪಕ ಪ್ರಚಾರ ನೀಡುವಂತೆ ಉದ್ಯೋಗ ವಿನಿಮಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಕ್ಫ್ ಆಸ್ತಿಗಳ ಸರ್ವೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಕ್ಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೇವರಾಜ ಅವರು ಮಾತನಾಡಿ, ಕೋಮು ಸಾಮರಸ್ಯ, ಕಾನೂನು ಸುವ್ಯವಸ್ಥೆಗೆ ಜಿಲ್ಲಾ ಪೊಲೀಸ್ ಇಲಾಖೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸೂಕ್ಷ್ಮ ಸಂದರ್ಭದಲ್ಲಿ ಶಾಂತಿ ಸಭೆನಡೆಸಿ ಸಮಸ್ಯೆಗೆ ಸ್ಪಂದಿಸಿದೆ. ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸಿ ಅಥವಾ ಪೊಲೀಸ್ ಸಹಾಯವಾಣಿ 24 ತಾಸು ಕಾರ್ಯನಿರ್ವಹಿಸುತ್ತಿದೆ. ಕರೆ ಮಾಡಿದರೆ ತ್ವರಿತವಾಗಿ ಸ್ಪಂದಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಗೋಪಾಲ ಲಮಾಣಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಆರ್.ವಾಸಣ್ಣ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಭೋಗಿ, ವಿವಿಧ ಇಲಾಖಾ ಅಧಿಕಾರಿಗಳು, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.