ಬೆಂಗಳೂರು
ಕ್ಷೇತ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಆರೋಪ ಮಾಡಿದ್ದರು. ಆದರೆ, ಇದೀಗ ರಾಜ್ಯ ಸರ್ಕಾರ ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ 45 ಶಾಸಕರ ಕ್ಷೇತ್ರಗಳಿಗೆ ಕ್ರಿಯಾ ಯೋಜನೆ ಅಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 161 ಕೋಟಿ ರೂ. ಬಿಡುಗಡೆ ಮಾಡಿದೆ.
ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಇದೇ ವರ್ಷ ಜನವರಿಯಲ್ಲಿ ರಾಜ್ಯ ಸರ್ಕಾರ 176 ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿತ್ತು. ಈ ವೇಳೆ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಬಾಕಿ ಉಳಿದಿತ್ತು. ಇದೀಗ ಶಾಸಕರ ಒತ್ತಡದ ಮೇರೆಗೆ ಅನುದಾನ ನೀಡಲಾಗಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದಿದ್ದ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ವಸತಿ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು 1,000 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೇ ವೇಳೆ ಮುಂದಿನ ವರ್ಷದಿಂದ ಹೆಚ್ಚಿನ ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಅದರಂತೆ ಇದೀಗ ಎರಡು ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣ ಬಿಡುಗಡೆ ಮಾಡಿದ್ದಾರೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಬಜೆಟ್‌ನಲ್ಲಿ 60 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದರಿಂದ 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಇಲಾಖೆಯಲ್ಲಿ ಲಭ್ಯವಿರುವ ಹಣದಿಂದ ಮರುಹಂಚಿಕೆ ಮಾಡುವ ಮೂಲಕ ಹೆಚ್ಚುವರಿಯಾಗಿ 40 ಕೋಟಿ ರೂ. ಪಾವತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.