ಪ್ರಜ್ವಲ್‌ ಪ್ರಕರಣ : ದಳಪತಿಗಳಿಗೆ ಧೈರ್ಯ ತುಂಬಿದ ಅಮಿತ್‌ ಷಾ…!

ಬೆಂಗಳೂರು:

    ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಜೆಡಿಎಸ್ ನಾಯಕರಿಗೆ ನಿದ್ದೆಗೆಡಿಸಿದ್ದು, ಈ ಹಿನ್ನೆಲೆಯಲ್ಲಿ ನಿಮ್ಮ ಜೊತೆ ನಾವಿದ್ದೇವೆಂದು ದಳಪತಿಗಳಿಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಧೈರ್ಯ ತುಂಬಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

    ರೇವಣ್ಣ ಮತ್ತು ಹೆಚ್’ಡಿ.ರೇವಣ್ಣ ಪ್ರಕರಣ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಪ್ರಕರಣ ಜೆಡಿಎಸ್ ನಾಯಕರಿಗೆ ದೊಡ್ಡ ಶಾಕ್ ನೀಡಿದೆ. ಪ್ರಕರಣದಿಂದ ದೇವೇಗೌಡ, ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು ಮುಜುಗರಕ್ಕೊಳಗಾಗಿದ್ದಾರೆ.

    ಈ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹೆಚ್’ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿರುವ ಅಮಿತ್ ಶಾ, ಪೆನ್ ಡ್ರೈವ್ ಪ್ರಕರಣ ಬಗ್ಗೆ ಚರ್ಚೆ ಮಾಡಿ, ಧೈರ್ಯ ಹೇಳಿದ್ದಾರೆಂದು ತಿಳಿದುಬಂದಿದೆ.

    ಮಹಿಳೆ ಅಪಹರಣ, ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್ ಪ್ರಕರಣದಿಂದಾಗಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ರೀತಿಯ ಅಡ್ಡಿ ಉಂಟಾಗುವುದಿಲ್ಲ ಎಂದು ಅಭಯ ನೀಡಿದ್ದಾರೆ. ಈ ಪ್ರಕರಣದಿಂದ ಮೈತ್ರಿಗೆ ಮುಜುಗರವಾಗಿರುವುದು ನಿಜ. ನೀವು ಈಗಾಗಲೇ ದೃಢವಾದ ನಿರ್ಧಾರವನ್ನು ತೆಗೆದುಕೊಂಡು ಪ್ರಕರಣದ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದೀರಿ. ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್‌ಐಟಿ ಬಂಧನದಲ್ಲಿರುವ ರೇವಣ್ಣ ಅವರನ್ನೂ ಸಹ ನೀವು ಸಮರ್ಥಿಸಿಕೊಂಡಿಲ್ಲ. ಈ ಪ್ರಕರಣ ಹೊರಬಂದ ನಂತರ ನಾನು ನಿಮ್ಮ ಎಲ್ಲ ಹೇಳಿಕೆಗಳನ್ನು ಗಮನಿಸಿದ್ದೇನೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ನೀವು ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಸ್ವಾಗತಾರ್ಹ. ಕಾನೂನು ಹೋರಾಟದಲ್ಲಿ ನಾವು ನಿಮ್ಮ ಜತೆಗಿರುತ್ತೇವೆ. ನೀವು ಧೈರ್ಯ ಕಳೆದುಕೊಳ್ಳಬೇಡಿ ಎಂದು ವಿಶ್ವಾಸ ತುಂಬುವ ಮಾತುಗಳನ್ನಾಡಿದ್ದಾರೆ ಎಂದು ಹೇಳಲಾಗಿದೆ.

     ಈ ಪ್ರಕರಣದಿಂದಾಗಿ ಮೈತ್ರಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗುವುದಿಲ್ಲ. ಇಂತಹ ಪ್ರಕರಣಗಳು ನಡೆದಾಗ ಯಾವುದೇ ರಾಜಕೀಯ ಪಕ್ಷಗಳಿಗೆ ಮುಜುಗರವಾಗುತ್ತದೆ. ನಾವು ನಿಮಗೆ ಸಂಪೂರ್ಣವಾಗಿ ಕಾನೂನಿನ ಹೋರಾಟಕ್ಕೆ ಬೆಂಬಲ ನೀಡಲಿದ್ದೇವೆ, ಕಾನೂನಿಗೆ ತಲೆ ಬಾಗುವುದಾಗಿ ನೀವು ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ತಪ್ಪು ಮಾಡಿಲ್ಲ ಎಂದರೆ ಖಂಡಿತವಾಗಿಯೂ ಕಾನೂನು ಹೋರಾಟದಲ್ಲಿ ಜಯ ಸಿಕ್ಕೇ ಸಿಗುತ್ತದೆ. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಧೈರ್ಯ ಹೇಳಿದ್ದಾರೆಂದು ತಿಳಿದುಬಂದಿದೆ.

   ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ನಮ್ಮ ಪಕ್ಷದ ಆಂತರಿಕ ಸಮೀಕ್ಷೆಯೂ ಅದನ್ನೇ ಹೇಳಿದೆ. ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲೂ ಗೆಲುವು ಸಾಧಿಸುತ್ತೇವೆ. ಕರ್ನಾಟಕದಲ್ಲಿ ನಾವು ನಮ್ಮ ನಿರೀಕ್ಷೆಯಷ್ಟೇ ಸ್ಥಾನಗಳನ್ನು ಗೆಲ್ಲುತ್ತೇವೆ. 2028 ವಿಧಾನಸಭೆ ಚುನಾವಣೆವರೆಗೂ ನಮ್ಮ ಮೈತ್ರಿ ಮುಂದುವರೆಯಬೇಕು. ಈ ಪ್ರಕರಣವನ್ನು ಕಾನೂನು ರೀತಿಯಲ್ಲಿ ಹೋರಾಟ ನಡೆಸಿ ಎಂದು ಹೇಳಿ ಅಮಿತ್ ಶಾ ಅವರು ಕುಮಾರಸ್ವಾಮಿಗೆ ವಿಶ್ವಾಸ ತುಂಬಿದ್ದಾರೆ ಎಂದು ಹೇಳಲಾಗಿದೆ. 

   ರೇವಣ್ಣ ಅವರ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಅನ್ವಯ ಹಾಸನದ ಹೊಳೆ ನರಸೀಪುರದ ಟೌನ್‌ ಪೊಲೀಸ್‌ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದಲ್ಲಿ ಎಚ್‌ ಡಿ ರೇವಣ್ಣ ಮೊದಲ ಆರೋಪಿಯಾಗಿದ್ದು, ಪ್ರಜ್ವಲ್‌ನನ್ನು ಎರಡನೇ ಆರೋಪಿಯನ್ನಾಗಿಸಲಾಗಿದೆ.

     ಏಪ್ರಿಲ್‌ 28ರಂದು ದಾಖಲಾಗಿರುವ ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳಾದ 354(ಎ), 354(ಡಿ), 506, 509 ಅಡಿ ಪ್ರಕರಣ ದಾಖಲಿಸಲಾಗಿದೆ. ಇದರ ತನಿಖೆಯನ್ನು ಹಿರಿಯ ಐಪಿಎಸ್‌ ಅಧಿಕಾರಿ ಬಿ ಕೆ ಸಿಂಗ್‌ ನೇತೃತ್ವದ ವಿಶೇಷ ತನಿಖಾ ತಂಡ ಆರಂಭಿಸಿದೆ.

    ಪ್ರಜ್ವಲ್ ರೇವಣ್ಣ ಪ್ರಕರಣ ಸಂತ್ರಸ್ತೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ. ಆದರೆ, ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ ಐಟಿ ನಾನಾ ಕಸರತ್ತು ನಡೆಸುತ್ತಿದೆ. ಈಗಾಗಲೇ ಬ್ಲೂ ಕಾರ್ನರ್ ನೋಟೀಸ್ ಹೊರಡಿಸಿ ರಾಜ್ಯಕ್ಕೆ ಕರೆತರುವ ಪ್ರಯತ್ನ ಕೂಡ ನಡೆಯುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap