ಬೆಂಗಳೂರು
ರೈತರಿಗೆ ವಕ್ಫ್ ನೋಟಿಸ್ ಖಂಡಿಸಿ ಜಿಲ್ಲೆ ಜಿಲ್ಲೆಯಲ್ಲೂ ಪ್ರತಿಭಟನೆ ಮಾಡಲಾಗುತ್ತಿದೆ. ಸರ್ಕಾರದ ವಿರುದ್ಧ ಬಿಜೆಪಿ ಬೀದಿಗಿಳಿದಿದೆ. ಇದರ ಮಧ್ಯೆ ಕರ್ನಾಟಕದಲ್ಲಿ ವಕ್ಫ್ ಮಂಡಳಿಗೆ ಸಂಬಂಧಪಟ್ಟಂತೆ ನಡೆಯುತ್ತಿರುವ ಎಲ್ಲ ಆಸ್ತಿ ನೋಂದಣಿ, ತಿದ್ದುಪಡಿಗಳನ್ನು ಈ ಕೂಡಲೇ ನಿಲ್ಲಿಸಿವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಕ್ಫ್ (ತಿದ್ದುಪಡಿ) ಮಸೂದೆ 2024 ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ವಿಪಕ್ಷ ನಾಯಕ ಆರ್ ಅಶೋಕ್ ಪತ್ರ ಬರೆದಿದ್ದಾರೆ.
ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಈ ರೀತಿ ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವ ಪರಿಣಾಮ ಸಾವಿರಾರು ಬಡವರು ಹಾಗೂ ರೈತರು ವಂಶಪಾರಂಪರ್ಯವಾಗಿ ಬಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ 15,000 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ನೋಟಿಸ್ ನೀಡಲಾಗಿದೆ ಎಂದು ನೂರಾರು ರೈತರು ಹೇಳಿದ ಬಳಿಕ ಈ ಸಂಗತಿ ಬೆಳಕಿಗೆ ಬಂದಿದೆ. ಎಲ್ಲಾ ಜಿಲ್ಲೆಗಳಲ್ಲಿ ತಲಾ 10,000 ಎಕರೆ ಜಮೀನನ್ನು ವಕ್ಫ್ ನೋಂದಣಿ ಮಾಡಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಹೇಳಲಾಗಿದೆ. ವಕ್ಫ್ ಮಂಡಳಿಯು ದೇವಸ್ಥಾನ, ಮಠ ಹಾಗೂ ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ಕೂಡ ತನ್ನದು ಎಂದು ಹೇಳಿಕೊಂಡಿದೆ. ಹಿಂದೂ ಸ್ಮಶಾನ ಕೂಡ ತನ್ನದು ಎಂದು ವಕ್ಫ್ ಉಲ್ಲೇಖಿಸಿರುವುದು ಇನ್ನಷ್ಟು ಆಘಾತದ ಸಂಗತಿ ಎಂದು ಹೇಳಿದ್ದಾರೆ.
13ನೇ ಶತಮಾನದಷ್ಟು ಇತಿಹಾಸ ಹೊಂದಿರುವ ವಿರಕ್ತ ಮಠಕ್ಕೆ ಸೇರಿದ ಸಿಂದಗಿಯ 1.28 ಎಕರೆ ಜಮೀನು, ವಿಜಯಪುರದ ಐತಿಹಾಸಿಕ ಸೋಮೇಶ್ವರ ದೇವಾಲಯ, ಕಲಬುರ್ಗಿಯ ಬೀರದೇವರ ಗುಡಿ ಸೇರಿದಂತೆ ಅನೇಕ ಜನಪ್ರಿಯ ಸ್ಥಳಗಳನ್ನು ಕೂಡ ವಕ್ಫ್ ತನ್ನದೆಂದು ಘೋಷಿಸಿಕೊಂಡಿದೆ. ಇದು ಜನರಲ್ಲಿ ಆತಂಕ ಉಂಟುಮಾಡಿದ್ದು, ಹಾವೇರಿಯಲ್ಲಿ ಹಿಂಸಾಚಾರ, ಗಲಭೆ ಕೂಡ ನಡೆದಿದೆ. ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ, ಜಂಟಿ ಸಮಿತಿ ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಜೊತೆ ಮಾತನಾಡಬೇಕು. ವಕ್ಫ್ಗೆ ಸಂಬಂಧಿಸಿದ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಬೇಕು ಎಂದು ಪತ್ರದ ಮೂಲಕ ಆರ್.ಅಶೋಕ್ ಮನವಿ ಮಾಡಿದ್ದಾರೆ.