ನವದೆಹಲಿ:
ಹರಿಯಾಣ ಸರ್ಕಾರ ನಮ್ಮ ಪಾಲಿನ ನೀರು ಹರಿಸಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಸಚಿವೆ ಅತಿಶಿ ಅವರು ಗುರುವಾರ ಬೆಳಗ್ಗೆ ಎಲ್‌ಎನ್‌ಜೆಪಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಚಿವೆ ಅತಿಶಿ ಅವರು ಇಂದು ಬೆಳಗ್ಗೆ 10.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಜೆಪಿ ಆಡಳಿತವಿರುವ ಹರಿಯಾಣ, ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಎಎಪಿ ನಾಯಕಿ ಮತ್ತು ದೆಹಲಿಯ ಜಲ ಸಚಿವೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಕುಳಿತಿದ್ದರು. ಐದು ದಿನಗಳ ಉಪವಾಸ ಸತ್ಯಾಗ್ರಹದ ನಂತರ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾದ ನಂತರ ಮಂಗಳವಾರ ಬೆಳ್ಳಂಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಆರಂಭದಲ್ಲಿ ಅತಿಶಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು ಮತ್ತು ನಂತರ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ ನಂತರ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಯಿತು.
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಸಿಪಿಎಂ ನಾಯಕಿ ವೃಂದಾ ಕಾರಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ಅತಿಶಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
