ಬೆಂಗಳೂರು:
ಇತ್ತೀಚಿಗಷ್ಟೇ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಅಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಬಿಆರ್ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.
ಆಳಂದ ಶಾಸಕ ಬಿ ಆರ್ ಪಾಟೀಲ್ ಅವರನ್ನು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಉಪಾಧ್ಯಕ್ಷರಾಗಿ ನೇಮಕ ಮಾಡುವುದರ ಜೊತೆಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಎಲ್ಲಾ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಫೆಬ್ರವರಿ 1 ರಂದು ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ ಎಂದು ಬಿಆರ್ ಪಾಟೀಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದರು. ಆದರೆ ರಾಜೀನಾಮೆಗೆ ಕಾರಣ ಏನು ಎಂಬ ಪ್ರಶ್ನೆಗೆ, ನಾನಾಗಿಯೇ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದರು. ಆದರೆ ಬಿಆರ್ ಪಾಟೀಲ್ ಅವರ ದಿಢೀರ್ ನಿರ್ಧಾರ ಅಚ್ಚರಿಗೆ ಕಾರಣವಾಗಿತ್ತು.
