28 ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ- ಬಿ.ವೈ.ವಿಜಯೇಂದ್ರ

 ಬೆಂಗಳೂರು:

    ವಾಲ್ಮೀಕಿ ಅಭಿವೃದ್ಧಿ ನಿಗಮದ 187  ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿಯವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದರು.

    ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದೆ; ಅದರ ದುರ್ಬಳಕೆ ಆಗಿದೆ. ಕಾಂಗ್ರೆಸ್ ಸರಕಾರವು ಈ ಹಣವನ್ನು ದೋಚಿದೆ ಎಂದು ಟೀಕಿಸಿದರು.

    ಕರ್ನಾಟಕ ರಾಜ್ಯ ಸರಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದ ಅವರು, ನಿಗಮದ ಹಗರಣ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯ ಪತ್ರದನ್ವಯ ಸಿಬಿಐ ತನಿಖೆ ನಡೆಯುತ್ತಿದೆ. ರಾಜ್ಯ ಸರಕಾರ ಆತುರಾತುರವಾಗಿ ಎಸ್‍ಐಟಿಯನ್ನೂ ರಚಿಸಿ ತಮಗೆ ಬೇಕಾದಂತೆ ತನಿಖೆ ನಡೆಸುತ್ತಿದೆ ಎಂದು ಟೀಕಿಸಿದರು.

    ಎಸ್‍ಐಟಿ ತೇಪೆ ಹಚ್ಚುವ ಕೆಲಸ ಮಾಡುತ್ತಿದೆ. ಅಲ್ಲಿ ಇಲ್ಲಿ ಅಧಿಕಾರಿ ಮನೆಯಲ್ಲಿ ಒಂದಷ್ಟು ಹಣ ಲಭಿಸಿದೆ ಎನ್ನುವ ಮೂಲಕ ಕಣ್ರವನ್ನು ರಾಜ್ಯ ಸರಕಾರÀ ಮಾಡುತ್ತಿದೆ ಎಂದು ದೂರಿದರು. ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ. ತೆಲಂಗಾಣಕ್ಕೆ ಬೇನಾಮಿ ಖಾತೆಗೆ ಹಣ ವರ್ಗಾವಣೆ ಮಾಡಿ ವಿತ್‍ಡ್ರಾ ಮಾಡಿದ್ದಾರೆ. ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಆರೋಪಿಸಿದರು. 

    ಹಿಂದೆಯೂ ಕಾಂಗ್ರೆಸ್ ಸರಕಾರ ಇದ್ದಾಗ ಇಂಥ ಅನೇಕ ಹಗರಣಗಳನ್ನು ಅವರದೇ ಎಸಿಬಿ ಮೂಲಕ ಮುಚ್ಚಿ ಹಾಕಿದ್ದರು ಎಂದು ಆರೋಪಿಸಿದರು. ಹೋರಾಟವನ್ನು ಇಲ್ಲಿಗೇ ಕೈಬಿಡುವುದಿಲ್ಲ ಎಂದ ಅವರು, ಪೆಟ್ರೋಲ್- ಡೀಸೆಲ್ ದರ ಏರಿಸಿದ್ದಾರೆ. ಹಾಲಿನ ದರ ಹೆಚ್ಚಿಸಿದ್ದಾರೆ. ಪೆಟ್ರೋಲ್- ಡೀಸೆಲ್ ದರ ಏರಿಸಿದ್ದರಿಂದ ರಾಜ್ಯದೆಲ್ಲೆಡೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ವಿವರಿಸಿದರು. 

    ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ನಡೆಯುತ್ತಿದೆ. ಜನರಿಗೆ ಬರೆ ಎಳೆಯುವ ಕೆಲಸವನ್ನು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ. ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಲಾಗಿದೆ. ವಿದ್ಯುತ್ ದರ ಏರಿಸಿದ್ದಾರೆ. ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಇದ್ದುದನ್ನು 2.5 ಲಕ್ಷಕ್ಕೆ ಏರಿಸಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು.

    ಗ್ಯಾರಂಟಿ ಹೆಸರಿನಲ್ಲಿ ಜನರ ಕಿವಿಗೆ ಹೂ ಮುಡಿಸಿದ್ದಾರೆ. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ನಾಡಿನ ಜನತೆಗೆ ದ್ರೋಹ ಬಗೆಯುತ್ತಿದೆ. ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಸಾಮಾನ್ಯ ಜನರೂ ಮಾತನಾಡುತ್ತಿದ್ದಾರೆ ಎಂದರು.

    ರಾಜ್ಯದ ರೈತರು ಬರದಿಂದ ನರಳಿ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಟ್ರ್ಯಾಕ್ಟರ್- ಟಿಲ್ಲರ್ ಬಳಸುವ ರೈತರೂ ತೊಂದರೆ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜದ ದರ ಶೇ 40- 50ರಷ್ಟು ಹೆಚ್ಚಾಗಿದೆ. ಇಂಥ ಸಂಕಷ್ಟದ ಸಂದರ್ಭದಲ್ಲೂ ಜನರಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರಕಾರ ಯಾಕೆ ಇಷ್ಟು ಕಟುವಾಗಿ ನಡೆದುಕೊಳ್ಳುತ್ತಿದೆ ಎಂದು ಪ್ರಶ್ನಿಸಿದರು. ಜನವಿರೋಧಿ ತೀರ್ಮಾನಗಳೇಕೆ ಎಂದು ಕೇಳಿದರು. 

    ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ನೋಡಿದರೆ ಅಯ್ಯೋ ಅನಿಸುತ್ತಿದೆ ಎಂದು ಅವರು ತಿಳಿಸಿದರು. ಹಾಲಿನ ದರದ ಬಳಿಕ ಬಸ್ ಪ್ರಯಾಣದರವೂ ದುಬಾರಿ ಆಗಲಿದೆ ಎಂದು ಅವರು ತಿಳಿಸಿದರು.

    ರಾಜ್ಯದ ಕಾಂಗ್ರೆಸ್ ಸರಕಾರವು ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದರೂ ಸಹ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಮತ್ತೊಂದೆಡೆ ಅಭಿವೃದ್ಧಿಶೂನ್ಯತೆ ರಾಜ್ಯವನ್ನು ಕಾಡುವಂತಾಗಿದೆ. ಅಭಿವೃದ್ಧಿ ಇಲ್ಲದೆ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ವಿಶ್ಲೇಷಿಸಿದರು

Recent Articles

spot_img

Related Stories

Share via
Copy link
Powered by Social Snap