ಬೆಂಗಳೂರು
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಬಂಧನದ ಭೀತಿಯಲ್ಲಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಶಾಸಕರಿಗೆ ದೊಡ್ಡ ರಿಲೀಫ್ ಸಿಕ್ಕಿ ಬಂಧನದ ಭೀತಿಯೂ ತಪ್ಪಿದಂತಾಗಿದೆ.ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ನಿನ್ನೆ ನಿರೀಕ್ಷಣಾ ಜಾಮೀನು ಕೋರಿ ರಾಜ್ಯ ಉಚ್ಛನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ನಟರಾಜನ್ ಅವರು ವಿರೂಪಾಕ್ಷಪ್ಪರವರಿಗೆ ನಿರೀಕ್ಷಣಾ ಜಾಮೀನು ನೀಡುವಂತೆ ಆದೇಶಿಸಿ ತನಿಖೆಗೆ ಸಹಕರಿಸುವಂತೆ ಸೂಚನೆಯನ್ನೂ ನ್ಯಾಯಾಲಯ ಶಾಸಕರಿಗೆ ನೀಡಿದೆ.ನಿರೀಕ್ಷಣಾ ಜಾಮೀನು ಮಂಜೂರಾದ 48 ಗಂಟೆಗಳ ಒಳಗೆ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗಬೇಕು. ಯಾವುದೇ ಸಾಕ್ಷಿಗಳನ್ನು ನಾಶಪಡಿಸಬಾರದು, ಕೆಎಸ್‌ಡಿಎಲ್ ಕಚೇರಿ ಪ್ರವೇಶ ನಿರ್ಬಂಧದ ಷರತ್ತನ್ನು ವಿಧಿಸಿ ನ್ಯಾಯಾಧೀಶರು ನಿರೀಕ್ಷಣಾ ಜಾಮೀನು ಮಂಜೂರು
ಮಾಡಿದ್ದಾರೆ.ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂ. ಮೌಲ್ಯದ ಬಾಂಡ್ ಹಾಗೂ ಇಬ್ಬರ ಭದ್ರತೆಯ ಮೇಲೆ ಜಾಮೀನು ನೀಡುವಂತೆ ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ.ಲೋಕಾಯುಕ್ತ ತನಿಖೆಗೆ ಶಾಸಕರು ಸಹಕರಿಸಬೇಕು, ಆದೇಶ ತಲುಪಿದ 48 ಗಂಟೆಯಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಮಾ. 17ಕ್ಕೆ ನ್ಯಾಯಾಲಯ ಮುಂದೂಡಿದೆ. ನ್ಯಾಯಾಲಯದ ಈ ಆದೇಶದಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಬಂಧನದ ಭೀತಿ ತಪ್ಪಿ ಅವರಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ.
ತನಿಖಾಧಿಕಾರಿಗಳ ಬದಲು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಲಂಚ ಪ್ರಕರಣದ ತನಿಖೆ ನಡೆಸುತ್ತಿದ್ದ ಲೋಕಾಯುಕ್ತದ ತಖಾಧಿಕಾರಿಗಳನ್ನು ಏಕಾಏಕಿ ಬದಲಾವಣೆ ಮಾಡಲಾಗಿದೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಉಚ್ಛ ನ್ಯಾಯಾಲಯದಲ್ಲಿ ನಡೆದಿರುವಾಗಲೇ ಈ ಪ್ರಕರಣದ ತನಿಖಾಧಿಕಾರಿಗಳನ್ನು ಬದಲಾವಣೆ ಮಾಡಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಹಾಗೆಯೇ, ಹಲವು ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ.
ಪುತ್ರನ ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಕೆಎಸ್ ಡಿಎಲ್ ಮಾಜಿ ಅಧ್ಯಕ್ಷ ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ ಕಳೆದ ಆರು ದಿನಗಳಿಂದ ಕೈಗೆ ಸಿಗದೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದು ಅವರ ಬಂಧನಕ್ಕೆ ಲೋಕಾಯುಕ್ತ ಮೂರು ವಿಶೇಷ ತಂಡಗಳನ್ನು ರಚಿಸಿದೆ.
ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿಗಳ ಬದಲಾವಣೆಯಾಗಿದ್ದು, ಕೇವಲ 4 ದಿನಕ್ಕೆ ಪ್ರಕರಣದ ಇಬ್ಬರು ತನಿಖಾಧಿಕಾರಿಗಳನ್ನು ಬದಲಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಡಿವೈಎಸ್‌ಪಿ ಪ್ರಮೋದ್ ಕುಮಾರ್, ಇನ್ಸ್ಪೆಕ್ಟರ್ ಕುಮಾರಸ್ವಾಮಿಯವರನ್ನು ಬದಲಾವಣೆ ಮಾಡಿ ಇವರ ಜಾಗಕ್ಕೆ ಡಿವೈಎಸ್‌ಪಿ ಆಂಥೋನಿ ಜಾನ್, ಇನ್ಸ್ಪೆಕ್ಟರ್ ಬಾಲಾಜಿ ಬಾಬು ಅವರನ್ನು ನೇಮಕ ಮಾಡಲಾಗಿದೆ.
ಏನಿದು ಪ್ರಕರಣ ಕಳೆದ ವಾರ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಶಾಂತ್ ಮತ್ತು ಸಹಚರರನ್ನು ಬಂಧಿಸಲಾಗಿತ್ತು. ಪ್ರಶಾಂತ್‌ನನ್ನು ಬಂಧಿಸಿದ ಬೆನ್ನಲ್ಲೇ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಒಟ್ಟು 7.72 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಕೆಎಸ್‌ಡಿಎಲ್ ಅಧ್ಯಕ್ಷಗಿರಿಗೆ ರಾಜೀನಾಮೆ ನೀಡಿ ಲೋಕಾಯುಕ್ತ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದರು. ಶಾಸಕರ ಪುತ್ರ ಸೇರಿದಂತೆ ಈ ಪ್ರಕರಣದಲ್ಲಿ ಬಂಧಿಸಲಾಗಿದ್ದ ಐವರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ