ಜಗಳೂರು: ಬೇಸಿಗೆ ಆರಂಭಕ್ಕೂ ಮುನ್ನವೇ ಜಗಳೂರು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಜಲಕ್ಷಾಮ ಎದುರಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಸಿದ್ಧರಾಗಬೇಕು. ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಪಿಡಿಒಗಳು ಕೇಂದ್ರ ಹಾಗೂ ಕಾರ್ಯಸ್ಥಾನ ಬಿಟ್ಟು ಕದಲುವಂತಿಲ್ಲ. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶಾಸಕ ಬಿ. ದೇವೇಂದ್ರಪ್ಪ ಖಡಕ್ ಎಚ್ಚರಿಕೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ 22 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ಅರಿಶಿಣಗುಂಡಿ, ಮರೇನಹಳ್ಳಿ, ಉಚ್ಚಂಗಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯಿದೆ. ಹೀಗಾಗಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ನೀರಿನ ಲಭ್ಯತೆ ಕುರಿತು ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಅಗತ್ಯವಿದ್ದಲ್ಲಿ ಸ್ಥಳೀಯ ಖಾಸಗಿ ಬೋರ್ವೆಲ್ ಮಾಲೀಕರೊಂದಿಗೆ ಮಾತುಕತೆ ನಡೆಸಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಪರಿಹಾರವಾಗದಿದ್ದರೆ ತಮ್ಮ ಗಮನಕ್ಕೆ ತರುವಂತೆ ಸೂಚಿಸಿದರು.
ಬಡವರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ಸಹಿಸುವುದಿಲ್ಲ
ಮರೇನಹಳ್ಳಿ ಗ್ರಾಮದ ಗೌರಮ್ಮ ಎಂಬ ಮಹಿಳೆ ಸಾಲ ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯವರು ಮನೆ ಜಪ್ತಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಡವರಿಗೆ ಸಾಲದ ಹೆಸರಿನಲ್ಲಿ ಕಿರುಕುಳ ನೀಡುವ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಾಲೂಕಿನ ಎಲ್ಲ ಮೈಕ್ರೋ ಫೈನಾನ್ಸ್ ಕಂಪನಿಗಳ ಸಭೆ ಕರೆದು ಸಮಸ್ಯೆ ಕುರಿತು ಚರ್ಚಿಸಲಾಗುವುದು. ಇಂತಹ ದೌರ್ಜನ್ಯ ಮುಂದುವರಿದರೆ ಬೆಳಗಾವಿ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ, ಕಠಿಣ ಕಾಯ್ದೆ ಜಾರಿಗೆ ಸರ್ಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು.
1,000 ಅಡಿ ಕೊರೆದರೂ ಸಿಗದ ನೀರು
ತಾಲೂಕಿನಲ್ಲಿ ಕೊಳವೆಬಾವಿ ಕೊರೆಯಲು ಬೋರ್ವೆಲ್ ಲಾರಿಗಳ ಕೊರತೆ ಎದುರಾಗಿದೆ. ಸುಮಾರು 1,000 ಅಡಿ ಆಳಕ್ಕೆ ಕೊರೆದರೂ ನೀರು ದೊರೆಯುತ್ತಿಲ್ಲ. ಹಳೆಯ ಬೋರ್ವೆಲ್ಗಳ ಮರುಕೊರೆಯುವಿಕೆಗೂ ಲಾರಿಗಳು ಸಿಗುತ್ತಿಲ್ಲ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸಾದಿಕ್ ಉಲ್ಲಾ ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕೆ. ಗುರುಬಸವರಾಜ್, ಗೌರಮ್ಮ ಅವರ ಪ್ರಕರಣವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಜಿಲ್ಲಾಧಿಕಾರಿಗಳು ಫೈನಾನ್ಸ್ ಕಂಪನಿ ಮುಖ್ಯಸ್ಥರು ಹಾಗೂ ಸಂತ್ರಸ್ತ ಮಹಿಳೆಯೊಂದಿಗೆ ಸಭೆ ನಡೆಸಿ ಕಾನೂನು ಚೌಕಟ್ಟಿನಲ್ಲಿ ನ್ಯಾಯ ಒದಗಿಸಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಕ್ಷೇತ್ರದ ಗ್ರಾಮೀಣ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ₹50 ಕೋಟಿ ಅನುದಾನ, ಪ್ರತಿ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ₹1 ಕೋಟಿ ಬಿಡುಗಡೆ, ಅಡಕೆ ಬೆಳೆ ವಿಮೆಯಲ್ಲಿ ರೈತರಿಗೆ ಆಗುತ್ತಿರುವ ತಾರತಮ್ಯ, ಕೊಂಡುಕುರಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಕ್ರಮ ಬೇಟೆ ತಡೆ, ಪಟ್ಟಣದ ರಸ್ತೆ ವಿಸ್ತರಣೆ ಹಾಗೂ ಮದಕರಿ ವೃತ್ತ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಲಾಯಿತು.
ಇದರೊಂದಿಗೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ, ಕುಡಿಯುವ ನೀರಿನ ಸಂಪರ್ಕಕ್ಕೆ ವಿದ್ಯುತ್ ನಿಯಮಗಳ ಸಡಿಲಿಕೆ, ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ, ಬಾಲ್ಯವಿವಾಹ ತಡೆ ಹಾಗೂ ವಿದ್ಯಾರ್ಥಿ ನಿಲಯಗಳ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಡಿಡಿಪಿಐ ಕೃಷ್ಣ ಪ್ರಸಾದ್, ತಹಶೀಲ್ದಾರ್ ಕೆ. ಗುರುಬಸವರಾಜ್, ತಾಪಂ ಇಒ ಕೆಂಚಪ್ಪ, ಷಂಷೀರ್ ಅಹಮದ್, ಜಿಪಂ ಎಇಇ ಶಿವಮೂರ್ತಿ, ಪಿಡಬ್ಲ್ಯೂಡಿ ಎಇಇ ಶಶಿಕಾಂತ್, ಬಿಇಒ ಈ. ಹಾಲಮೂರ್ತಿ, ಕೃಷಿ ಇಲಾಖೆ ಎಡಿಎ ಎಚ್. ಶ್ವೇತಾ, ಎಸ್ಎಡಿಎಚ್ ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.








