
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಿಧಾನಪರಿಷತ್ ಸದಸ್ಯ ನಜೀರ್ ಅಹಮದ್ ಅವರನ್ನು ಬಿಡುಗಡೆ ಮಾಡಲಾಗಿದೆ.
ಈ ಸಂಬಂಧ ನಿನ್ನೆ ಆದೇಶ ಹೊರಡಿಸಲಾಗಿದ್ದು, ೨೦೨೩, ಜೂನ್ ೧ ರಂದು ನಜೀರ್ ಅಹಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದ್ದು, ಅವರನ್ನು ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.
ಈ ಮೂಲಕ ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪದಡಿ ನಜೀರ್ ಅಹಮದ್ ಅವರ ತಲೆ ದಂಡವಾಗಿದ್ದು, ಇದಕ್ಕೂ ಮೊದಲು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅ ಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೂಚನೆಯಂತೆ ಅಬ್ದುಲ್ ಜಬ್ಬಾರಿ ಮೂರು ದಿನಗಳ ಹಿಂದೆಯೇ ರಾಜೀನಾಮೆ ನೀಡಿದ್ದರು.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹಮದ್, ಅಬ್ದುಲ್ ಜಬ್ಬಾರ್ ಇವರುಗಳು ಪಕ್ಷದ ಪರ ಕೆಲಸ ಮಾಡಿಲ್ಲ. ಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಷಡ್ಯಂತ್ರ ಮಾಡಿದ್ದರು ಎಂದು ಕಾಂಗ್ರೆಸ್ನ ಅಲ್ಪಸಂಖ್ಯಾತ ಮುಖಂಡರುಗಳೇ ಆರೋಪಿಸಿ ಈ ಬಗ್ಗೆ ಹೈಕಮಾಂಡ್ಗೆ ದೂರು ನೀಡಿದ್ದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಈ ಬಗ್ಗೆ ಹೈಕಮಾಂಡ್ಗೆ ವರದಿ ನೀಡಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ನಾಯಕರುಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದರು.ಅದರಂತೆ ಈಗ ಇಬ್ಬರು ಮುಸ್ಲಿಂ ನಾಯಕರ ತಲೆದಂಡವಾಗಿದ್ದು, ಸಚಿವಜಮೀರ್ ಅಹಮದ್ ಖಾನ್ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಡಿಕೆಶಿ ಪ್ರತಿಕ್ರಿಯೆ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮದ್ ಅವರನ್ನು ಬಿಡುಗಡೆ ಮಾಡಿರುವ ಬಗ್ಗೆ ಬೆಂಗಳೂರಿನಲ್ಲಿಂದು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ದಾವಣಗೆರೆ ಉಪಚುನಾವಣೆಯಲ್ಲಿ ನಜೀರ್ ಅಹಮದ್ ಅವರಿಗೆ ದಾವಣಗೆರೆಗೆ ತೆರಳಿ ಕೆಲಸ ಮಾಡುವಂತೆ ಸೂಚಿಸಲಾಗಿತ್ತು. ಹಾಗೆಯೇ ಎಲ್ಲರೂ ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿತ್ತು. ಇಷ್ಟಾದರೂ ಅವರು ಪಕ್ಷದ ಅಭ್ಯರ್ಥಿಪರ ಕೆಲಸ ಮಾಡಿಲ್ಲ ಎಂಬ ದೂರುಗಳು ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಬಗ್ಗೆ ಮಾಹಿತಿ ಇತ್ತು ಹಾಗಾಗಿ ಅವರು ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಿದರು.
ದೆಹಲಿಯಲ್ಲಿ ಕೈ ಶಾಸಕರು ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಸಚಿವಸ್ಥಾನಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಭೇಟಿ ಮಾಡುವುದು ತಪ್ಪಲ್ಲ. ಆದರೆ ಮಾಧ್ಯಮದವರ ಮುಂದೆ ಏನೆನೋ ಮಾತನಾಡಿದ ಅವರ ಕ್ರಾಸ್ ಕ್ವೊಶ್ಚ್ಷನ್ಗೆ ಬಲಿಯಾಗಬೇಡಿ ಎಂದು ನಾನು ಹೇಳಿದ್ದೇನೆ. ಯಾವುದೇ ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತು ಉಲ್ಲಂಘಿಸಿದರೆ ಕ್ರಮಕೈಗೊಳ್ಳಲೇಬೇಕಾಗುತ್ತದೆ ಎಂದರು
ಅಹಮದ್ ಖಾನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.








