ಬೆಂಗಳೂರು:
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಸ್ ಉಮಾಶಂಕರ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಡಳಿತಾಧಿಕಾರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಕೂಡಲೇ ಅವರು ಮುಂಗಾರು ಮಳೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸಲು ಎಲ್ಲ ಅಧಿಕಾರಿಗಳು ಮತ್ತು ನಾಗರಿಕ ಸಂಸ್ಥೆಗಳಿಗೆ ಸೂಚನೆಗಳನ್ನು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶಂಕರ್, ಮಳೆಗೆ ಸಂಬಂಧಿಸಿದ ಸಮಸ್ಯೆಗಳು, ಧರೆಗುರುಳುವ ಮರಗಳು, ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಎಲ್ಲ ಎಂಟು ವಲಯಗಳ ಆಯುಕ್ತರಿಗೆ ತಿಳಿಸಲಾಗಿದೆ ಎಂದರು.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ನೀರಿನ ಮಾಲಿನ್ಯಕ್ಕೆ ಸಂಬಂಧಿಸಿದ ದೂರುಗಳನ್ನು ತಕ್ಷಣವೇ ಪರಿಹರಿಸಲು ಅವರು ಸೂಚಿಸಿದರು.
‘ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಅರಣ್ಯ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಂತಹ ಎಲ್ಲ ಇಲಾಖೆಗಳು ಮಳೆಗಾಲದಲ್ಲಿ ಮಳೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಾಗ ಉತ್ತಮವಾಗಿ ಸಮನ್ವಯ ಸಾಧಿಸಲು ಸೂಚಿಸಲಾಗಿದೆ’ ಎಂದು ಉಮಾಶಂಕರ್ ಹೇಳಿದರು.
ವಲಯಗಳ ಆಯುಕ್ತರು ತಂಡಗಳ ಮುಖ್ಯಸ್ಥರಾಗಿರುತ್ತಾರೆ. ಮಳೆನೀರು ಚರಂಡಿಗಳನ್ನು ಸರಿಪಡಿಸಲು ಮತ್ತು ನೀರು ಮುಕ್ತವಾಗಿ ಹರಿಯಲು ಎದುರಾಗಿರುವ ಅಡಚಣೆಗಳನ್ನು ತೆರವುಗೊಳಿಸಲು ವಲಯ ಮುಖ್ಯಸ್ಥರಿಗೆ ತಿಳಿಸಲಾಗಿದೆ. ರಸ್ತೆ ಬದಿಯ ಅವಶೇಷಗಳನ್ನು ಸಹ ತೆರವುಗೊಳಿಸಲು ವಲಯ ಮುಖ್ಯಸ್ಥರು ನೋಡಿಕೊಳ್ಳುತ್ತಾರೆ ಎಂದು ಅವರು ಹೇಳಿದರು.