ತುಮಕೂರು:

ಮಹಿಳಾ ದೌರ್ಜನ್ಯ ತಡೆ ದಿನಾಚಾರಣೆಯಲ್ಲಿ ಶಾಂತಶ್ರೀ ಕರೆ
ಮಹಿಳೆಯರ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ನಿಲ್ಲಬೇಕಾದರೆ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು. ಸ್ವಯಂ ರಕ್ಷಕರಾಗಬೇಕು ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಶಾಂತಶ್ರೀ.ಎಂ ಅಭಿಪ್ರಾಯಪಟ್ಟರು.
ಭಾರತ ಸರ್ಕಾರ ಯುವಜನ ಹಾಗೂ ಕ್ರೀಡಾಸಚಿವಾಲಯ, ನೆಹರು ಯುವಕೇಂದ್ರ ತುಮಕೂರು ಹಾಗೂ ವಿದ್ಯೋದಯ ಕಾನೂನು ಕಾಲೇಜು, ಐಕ್ಯೂಎಸಿ ಎನ್.ಎಸ್.ಎಸ್. ವತಿಯಿಂದ ವಿದ್ಯೋದಯ ಕಾನೂನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚಾರಣೆಯಲ್ಲಿ ಅವರು ಮಾತನಾಡಿದರು.
ಇಂದು ಸಮಾಜದಲ್ಲಿ ಮಹಿಳೆಯರು ಯಾವ ರೀತಿಯ ದೌರ್ಜನ್ಯವನ್ನು ಎದುರಿಸುತ್ತಿದ್ದಾರೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬಾಲ್ಯ ವಿವಾಹಗಳ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣ ಘಟಕದ ಲೀಗಲ್ ಕಂ ಪ್ರೋಬೆಷನರಿ ಅಧಿಕಾರಿ ಬೇಬಿ ಕವಿತಾ ಮಾತನಾಡಿ, 18 ವರ್ಷದ ಒಳಗಿನ ಮಕ್ಕಳು ಅನುಭವಿಸುತ್ತಿರುವ ಲೈಂಗಿಕ ದೌರ್ಜನ್ಯವನ್ನು ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎ.ನಾರಾಯಣಸ್ವಾಮಿ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಕುರಿತು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಯುವಕರು ಇಂತಹ ಅನಿಷ್ಟ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಯೋಚಿಸಬೇಕು ಎಂದು ಹೇಳಿದರು.
ಸಹಾಯಕ ಪ್ರಾಧ್ಯಾಪಕಿ ಶಮಾ ಸೈದಿ ಅತಿಥಿಗಳನ್ನು ಪರಿಚಯಿಸಿದರು. ಸಹಾಯಕ ಪ್ರಾಧ್ಯಾಪಕಿ ಎನ್.ಎಸ್.ಮಂಜುಳ ಸ್ವಾಗತಿಸಿದರು. ಡಾ.ಮಮತಾ ಕ್ಯಾತಣ್ಣ ವಂದಿಸಿದರು. ವಿದ್ಯಾರ್ಥಿಗಳಾದ ರಶ್ಮಿ ಹೆಚ್.ಎಸ್. ಹಾಗೂ ಸಂಗೀತ ಎನ್.ವಿ. ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು.
ಲೈಂಗಿಕ ದೌರ್ಜನ್ಯಕ್ಕೆ ಹಾಗೂ ಹಿಂಸೆಗೆ ಒಳಗಾಗುವ ಮಹಿಳೆಯರು ಮತ್ತು ಮಕ್ಕಳು ತಮಗಾದ ದೌರ್ಜನ್ಯವನ್ನು ತಾಲ್ಲೂಕು ಅಥವಾ ಜಿಲ್ಲೆಗಳಲ್ಲಿರುವ ಸಾಂತ್ವಾನ ಕೇಂದ್ರಗಳಲ್ಲಿ ತಮ್ಮ ಸಮಸ್ಯೆಯನ್ನು ಹೇಳಿಕೊಳ್ಳುವ ಪ್ರಯತ್ನ ಮಾಡಬೇಕು. ಪೋಷಕರು ತಮ್ಮ ಮಕ್ಕಳ ಜೊತೆ ಪ್ರೀತಿ ವಿಶ್ವಾಸದಿಂದ ಇದ್ದು, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನವಹಿಸಬೇಕು.
ಬೇಬಿ ಕವಿತಾ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








