ಬೆಳಗಾವಿ:
ಬೆಳಗಾವಿಯ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಹಲವು ಮಂದಿ ಕಾರ್ಮಿಕರು ಘಟನಾ ಸ್ಥಳದಲ್ಲಿ ಸಿಲುಕಿರುವ ಸಾಧ್ಯತೆ ಇದೆ.
ನಾವಗೆ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಸುಲೆನ್ ಟೇಪ್ ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿದ್ದು, ಬೆಳಗಾವಿ ಉಪ ಆಯುಕ್ತ ಮೊಹಮ್ಮದ್ ರೋಷನ್ ನೀಡಿರುವ ಮಾಹಿತಿಯ ಪ್ರಕಾರ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 40-70 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ. ಈ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಾರ್ಖಾನೆಯನ್ನು ಆವರಿಸಿತ್ತು. ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಇತ್ತೀಚಿನ ಮಾಹಿತಿಯ ಪ್ರಕಾರ ಶೇ.70 ರಷ್ಟು ಬೆಂಕಿಯನ್ನು ನಂದಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಮೂವರನ್ನು ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆಯ ಒಳಗೆ ಇನ್ನೂ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಬೆಳಗಾವಿ ಉಪ ಆಯುಕ್ತ ಮೊಹಮ್ಮದ್ ರೋಷನ್ ಹೇಳಿದ್ದಾರೆ
ಸುಟ್ಟಗಾಯಗಳಾಗಿರುವವರಿಗೆ ಚಿಕಿತ್ಸೆ ನೀಡಲು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಕನಿಷ್ಠ 200 ಬೆಡ್‌ಗಳನ್ನು ಸಿದ್ಧಪಡಿಸುವಂತೆ ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು. ಬೆಳಗಾವಿ ಪೊಲೀಸ್ ಕಮಿಷನರ್ ಐಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಮತ್ತು ವಿವಿಧ ಇಲಾಖೆಗಳ ಹಲವಾರು ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಗಳನ್ನು ಸಂಯೋಜಿಸಿದರು.