ತುಮಕೂರು:
ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು ಜರುಗದಂತೆ ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಬಾಲಭವನದಲ್ಲಿ ಆಯೋಜಿಸಲಾಗಿದ್ದ “ಬಾಲ್ಯವಿವಾಹ ನಿಷೇಧ ಅಭಿಯಾನಕ್ಕೆ ಚಾಲನಾ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್ ಸಮಯದಲ್ಲಿ ಹೆಚ್ಚಳ: ಕೋವಿಡ್ ಸಂದರ್ಭದಲ್ಲಿ ಬಾಲ್ಯವಿವಾಹÀ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ವರದಿಯಾಗಿದ್ದು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಬಾಲ್ಯವಿವಾಹ ಜರುಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಜಾಗೃತಿ ಮೂಡಿಸಿ: ಅನಕ್ಷರತೆ, ಬಡತನಗಳಂತಹ ಮೂಲ ಕಾರಣಗಳಿಂದ ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗಿಗೆ ಇಂದಿಗೂ 18 ವರ್ಷದೊಳಗಿನ ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ.
ಶಿಕ್ಷಣದ ಪ್ರಮಾಣ ಕಡಿಮೆ ಇರುವ, ಆರ್ಥಿಕವಾಗಿ ಹಿಂದುಳಿದಿರುವ ಗೊಲ್ಲರಹಟ್ಟಿಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ಕಂಡುಬರುವುದರಿಂದ ಅಂತಹ ಪ್ರದೇಶಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದರು.
ಬಾಲ್ಯವಿವಾಹಕ್ಕೆ ಒಳಪಟ್ಟು ಮಾನಸಿಕವಾಗಿ ಮತ್ತು ದೈಹಕವಾಗಿ ನೊಂದಿರುವ ಹೆಣ್ಣು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡೋಣ ಮತ್ತು ಬಾಲ್ಯವಿವಾಹ ತಡೆಗಟ್ಟೋಣ ಎಂದು ಪ್ರತಿಜ್ಷೆ ಬೋಧಿಸಿದರು. 18 ವರ್ಷದೊಳಗಿನÀ ಹೆಣ್ಣು ಮಕ್ಕಳು ಹಾಗೂ 21 ವರ್ಷದೊಳಗಿನÀ ಗಂಡು ಮಕ್ಕಳ ಬಾಲ್ಯವಿವಾಹವನ್ನು ತಡೆಗಟ್ಟಲು ನಾವೆಲ್ಲರೂ ಕೈಜೋಡಿಸಬೇಕು ಎಂದರು.
ದೇಶ 2ನೇ ಸ್ಥಾನದಲ್ಲಿದೆ: ಅಧ್ಯಕ್ಷತೆವಹಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಮಾತನಾಡಿ, ಬಾಲ್ಯವಿವಾಹ ಹೆಚ್ಚಾಗಿ ನಡೆಯತ್ತಿರುವ ದೇಶಗಳಲ್ಲಿ ಭಾರತ ದೇಶವು ಎರಡನೇ ಸ್ಥಾನದಲ್ಲಿದ್ದು, ಅದರಲ್ಲಿ ಕರ್ನಾಟಕ ರಾಜ್ಯ 8ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಸರಿಯಾದ ನಿರ್ಧಾರ ತೆಗೆದುಕೊಳ್ಳಿ: ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಾಹಕಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಬಾಲ್ಯವಿವಾಹ ಎಂಬ ಸಾಮಾಜಿಕ ಪಿಡುಗನ್ನು ಹೋಗಲಾಡಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಅರಿವಿಲ್ಲದ ವಯಸ್ಸಿನಲ್ಲಿ ವಿವಾಹವಾದ ಹೆಣ್ಣುಮಕ್ಕಳ ಮನಸ್ಸು ವಯಸ್ಸಿಗೆ ಬಂದಾಗ ವಿಚಲಿತವಾಗುವುದರಿಂದ ಪೋಷಕರು ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಹಾಗೂ ಸಿಬ್ಬಂದಿ ವರ್ಗದವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಾಸಂತಿ ಉಪ್ಪಾರ, ಅಧಿಕಾರಿ ಡಾ.ಕೇಶವರಾಜ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತ್ಯಾಗರಾಜು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ