ರಾಜ್ಯಪಾಲರಿಗೆ ಬಿಜೆಪಿಯಿಂದ ದೂರು…..!

ಬೆಂಗಳೂರು:

    ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ವಜಾಗೊಳಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿ ಎಂದು ಪ್ರತಿಪಕ್ಷ ಬಿಜೆಪಿ ಶಾಸಕರು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

   ಬಿಜೆಪಿ ಮತ್ತು ಜೆಡಿಎಸ್ ಶಾಸಕರು ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ ನಡೆಸಿ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಿದರು.

   ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸರ್ಕಾರದ ವಿರುದ್ಧ ದೂರು ಸಲ್ಲಿಸಿದರು.

    ಮನವಿ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪಾಕಿಸ್ತಾನ ಪರ ಘೋಷಣೆ ಕೂಗಿರುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯಿಂದ ತನಿಖೆಗೆ ಸರ್ಕಾರ ಆದೇಶಿಸಬೇಕು. ರಾಜ್ಯ ಸರ್ಕಾರವು ಸಂವಿಧಾನದ ಪ್ರಕಾರ ಕಾರ್ಯನಿರ್ವಹಿಸದ ಕಾರಣ ಮತ್ತು ದೇಶ ವಿರೋಧಿಗಳನ್ನು ರಕ್ಷಿಸುತ್ತಿರುವ ರಾಜ್ಯ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

   ಕಾಂಗ್ರೆಸ್ ನೈತಿಕವಾಗಿ ದಿವಾಳಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಸತ್ಯಕ್ಕೆ ದೂರವಾಗಿದೆ. ಇದೀಗ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಸಮರ್ಥಿಸಿಕೊಳ್ಳುವ ಮೂಲಕ ಅವಕ ನಿಜ ಮುಖ ಮತ್ತಷ್ಟು ಬಯಲಾಗಿದೆ ಎಂದರು.

    ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಮುಗಿದಿರುವುದರಿಂದ ಈ ಘಟನೆಯನ್ನು ಎಲ್ಲರೂ ಮರೆತುಬಿಡುತ್ತಾರೆ ಎಂದು ಕಾಂಗ್ರೆಸ್ ನಾಯಕರು ಭಾವಿಸುತ್ತಾರೆ, ಆದರೆ, ರಾಜ್ಯದ ಜನತೆ ಇದನ್ನು ಮರೆಯುವುದಿಲ್ಲ. ಇದರ ವಿರುದ್ಧ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಹೇಳಿದರು. 

    ವಿಪಕ್ಷ ನಾಯಕ ಆರ್. ಅಶೋಕ್ ಮತನಾಡಿ, ಸರ್ಕಾರ ಜನರ ಹಾದಿ ತಪ್ಪಿಸಲು ಮತ್ತು ಪ್ರಕರಣನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಅಲ್ಲದೆ, ಎಫ್‌ಎಸ್‌ಎಲ್ ವರದಿಯನ್ನು ಸರ್ಕಾರ ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಿದರು.

   ಇದೇ ವೇಳೆ ಬಿಜೆಪಿಗೆ ಪಾಕಿಸ್ತಾನ ಶತ್ರು ದೇಶ, ನಮಗಲ್ಲ ಎಂಬ ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ಹೇಳಿಕೆ ವಿರುದ್ಧವೂ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು. ಹರಿಪ್ರಸಾದ್ ಅವರ ಹೇಳಿಕೆ ಕಾಂಗ್ರೆಸ್‌ನ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.

Recent Articles

spot_img

Related Stories

Share via
Copy link
Powered by Social Snap