ಬೆಂಗಳೂರು:
ಬಿಜೆಪಿ ಕೋರ್ ಕಮಿಟಿ ಸಭೆ ಸೋಮವಾರ ನಡೆದಿದ್ದು, ಸಭೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ ಕುರಿತು ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ.ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ ಅವರು, ಉಪಚುನಾವಣೆಯ ದಿನಾಂಕಗಳು ಯಾವಾಗ ಬೇಕಾದರೂ ಪ್ರಕಟವಾಗುವ ನಿರೀಕ್ಷೆಯಿದೆ. ಹೀಗಾಗಿ ಅದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಲು ಪಕ್ಷ ಸಿದ್ಧವಾಗುತ್ತಿದೆ ಎಂದು ಹೇಳಿದರು.
ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ವೇಳೆ ಮೈತ್ರಿಕೂಟದ ಪಾಲುದಾರ ಜೆಡಿಎಸ್ ಜೊತೆಗೂ ಸಮಾಲೋಚನೆ ನಡೆಸಲು ಬಿಜೆಪಿ ಕೋರ್ ಕಮಿಟಿ ನಿರ್ಧರಿಸಿದೆ. ಅಲ್ಲದೆ, ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಅ.21ರಂದು ನಡೆಯಲಿದೆ. ಬಸವರಾಜ ಬೊಮ್ಮಾಯಿ ಎರಡು ಜಿಲ್ಲೆಗಳಿಗೂ ಭೇಟಿ ನೀಡಿ ಆಕಾಂಕ್ಷಿಗಳ ಜೊತೆ ಚರ್ಚಿಸಿ ಮಾಹಿತಿ ಕಲೆ ಹಾಕಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತಂತೆಯೂ ಚರ್ಚೆಯಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದೆಹಲಿಯಲ್ಲಿ ಪಕ್ಷದ ಕೇಂದ್ರ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಎತ್ತಿ ಹಿಡಿಯಲು ಸಭೆ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.