ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ತಮ್ಮ ಸಹೋದರ ಡಿಕೆ ಸುರೇಶ್ ಅವರನ್ನು ಬೆಂಬಲಿಸುವಂತೆ ಮತದಾರರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಕಾವೇರಿ ನೀರು ಪೂರೈಕೆ, ಸಿಎ ನಿವೇಶನ ಮತ್ತು ಆಕ್ಯುಪೆನ್ಸಿ ಸರ್ಟಿಫಿಕೇಟ್ ಹಸ್ತಾಂತರಿಸಿ ಡಿಕೆ ಸುರೇಶ್‌ಗೆ ಮತ ನೀಡುವಂತೆ ಶಿವಕುಮಾರ್ ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿ ದೂರು ನೀಡಿದೆ. ಈ ಎರಡು ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.
ಇನ್ನೊಂದು ದೂರಿನಲ್ಲಿ, ಚಿಕ್ಕರಾಜೇನಹಳ್ಳಿ (ಕುಣಿಗಲ್)ಯಲ್ಲಿರುವ ಪ್ರೇಮ್ ಕುಮಾರ್/ಪಿಜಿ ರಾಮಯ್ಯ ಎಂಬುವವರಿಗೆ ಸೇರಿದ ಕೃಷಿಭೂಮಿಗೆ ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯದ ಮೇರೆಗೆ ಬೆಂಕಿ ಹಚ್ಚಲಾಗಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯಿಸಿದೆ.
‘ಕುಣಿಗಲ್ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳನ್ನು ಅತ್ಯಂತ ಸೂಕ್ಷ್ಮ ಎಂದು ಪರಿಗಣಿಸಬೇಕು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅರೆಸೇನಾ ಪಡೆಯನ್ನು ನಿಯೋಜಿಸಬೇಕು’ ಎಂದು ಬಿಜೆಪಿ ಹೇಳಿದೆ.
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಬಿಜೆಪಿ ದೂರು ದಾಖಲಿಸಿದೆ. ಕಲಬುರಗಿಯಲ್ಲಿ 39 ಕೋಟಿ ರೂ. ವೆಚ್ಚದ ಕೃಷಿ ಕೇಂದ್ರವನ್ನು ಸ್ಥಾಪಿಸುವುದಾಗಿ ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕ್ ಘೋಷಿಸಿದ್ದಾರೆ ಎಂದು ದೂರಿನಲ್ಲಿ ಬಿಜೆಪಿ ಆರೋಪಿಸಿದೆ.