ಬೆಂಗಳೂರು:
ಬಿಜೆಪಿ ಟಿಕೆಟ್ ಘೋಷಣೆಗೂ ಮುನ್ನವೇ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ ಅದೇನೆಂದರೆ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರ್ ರಾಜೀನಾಮೆ ನೀಡಿದ್ದಾರೆ.
ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ನೀಡಿದ್ದು, ಅವರೂ ಕೂಡ ರಾಜಿನಾಮೆ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು.
ಬಿಜೆಪಿ ಮೂಲಗಳ ಪ್ರಕಾರ ಚಿಂಚನಸೂರ್ ರಾಜಿನಾಮೆಗೆ ಟಿಕೆಟ್ ನಿರಾಕರಣೆಯೇ ಕಾರಣ ಎನ್ನಲಾಗಿದೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಅಂತೆಯೇ ಬಿಜೆಪಿ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.
ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರೂ ಆಗಿರುವ ಚಿಂಚನಸೂರ್, 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ. ಗುರುಮಠಕಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2018ರ ವಿಧಾನಸಭ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋತಿದ್ದ ಅವರು ಇದೀಗ ಮತ್ತೆ ‘ಕೈ’ ಪಕ್ಷದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ಕೊಡಲು ಮುಂದಾಗಿದ್ದರು. ಆದರೆ, ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಬಿಜೆಪಿಯಲ್ಲೇ ಉಳಿಯುವುದಾಗಿ ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ