ಧಾರವಾಡ:
ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ ಎಸ್.ಐ. ಚಿಕ್ಕನಗೌಡರ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಚಿಕ್ಕನಗೌಡರ ಅವರೊಂದಿಗೆ ಶಿಗ್ಗಾವಿಯ ಬಿಜೆಪಿಯ ಕೆಲವು ಮುಖಂಡರು ಸಹ ಕಾಂಗ್ರೆಸ್ ಸೇರಿದರು.
ಚಿಕ್ಕನಗೌಡರ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಚುನಾವಣೆ ಬಳಿಕ ಸೈಲೆಂಟ್ ಆಗಿದ್ದ ಅವರು ಕಳೆದ ಕೆಲ ದಿನಗಳ ಹಿಂದೆ ತಾವು ಕಾಂಗ್ರೆಸ್ ಸೇರುವುದಾಗಿ ಬಹಿರಂಗವಾಗಿ ಹೇಳಿದ್ದರು.ಎರಡು ವಾರಗಳ ಹಿಂದಷ್ಟೇ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಇದಕ್ಕೂ ಮುನ್ನ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು.