ನವದೆಹಲಿ:
ಕೆ ಮರಿಗೌಡ ಅವರು ಮುಡಾ ಅಧ್ಯಕ್ಷ ಸ್ಥಾನದಿಂದ ಬುಧವಾರ ಕೆಳಗಿಳಿದ ಬೆನ್ನಲ್ಲೇ, ಭೂ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂರ್ಯ ಮುಳುಗುದರೊಳಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಅಧ್ಯಕ್ಷ ಕೆ ಮರಿಗೌಡ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಡಾ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ… ನಿಮ್ಮಲ್ಲಿ ಕಿಂಚಿತ್ತೂ ನೈತಿಕತೆ ಉಳಿದಿದ್ದರೆ ಕೂಡಲೇ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ. ಇಂದು ಸೂರ್ಯಾಸ್ತದೊಳಗೆ ರಾಜೀನಾಮೆ ನೀಡಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ, ಸಂಸದ ಸಂಬಿತ್ ಪಾತ್ರಾ ಒತ್ತಾಯಿಸಿದ್ದಾರೆ.
ಮರಿಗೌಡ ಅವರ ರಾಜೀನಾಮೆ ಮತ್ತು ಸಿದ್ದರಾಮಯ್ಯ ಅವರ ಪತ್ನಿ ಅವರಿಗೆ ಮಂಜೂರು ಮಾಡಿದ ಮುಡಾ ನಿವೇಶನಗಳನ್ನು ಹಿಂದಿರುಗಿಸಿರುವುದು ಮುಖ್ಯಮಂತ್ರಿಗಳು ‘ತಲೆಯಿಂದ ಕಾಲಿನವರೆಗೆ ಹಗರಣದಲ್ಲಿ ಮುಳುಗಿದ್ದಾರೆ’ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.ಇದಕ್ಕೂ ಮುನ್ನ ಮರಿಗೌಡ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದರು.
ಸಿಎಂ ನಿರ್ದೇಶನದ ಮೇರೆಗೆ ರಾಜೀನಾಮೆ ನೀಡಿದ್ದೇನೆ. ಆರೋಗ್ಯ ಸಮಸ್ಯೆ ಇದ್ದ ಕಾರಣ ರಾಜೀನಾಮೆ ನೀಡಿದ್ದೇನೆ… ನನ್ನ ಮೇಲೆ ಯಾವುದೇ ಒತ್ತಡವಿಲ್ಲ. ಆರೋಗ್ಯ ಸಮಸ್ಯೆ ಇದ್ದ ಕಾರಣ ರಾಜೀನಾಮೆ ನೀಡಿದ್ದೇನೆ ಎಂದು ಮರಿಗೌಡ ಅವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.
‘ತನಿಖೆ ಮುಂದುವರಿದಿದ್ದು, ಮುಂದುವರಿಯಲಿದೆ.. ಅವ್ಯವಹಾರ ನಡೆದಿದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದರು.ಸಿದ್ದರಾಮಯ್ಯ ಅವರ ಪತ್ನಿಗೆ ಮುಡಾದಿಂದ 14 ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದ ತನಿಖೆ ನಡೆಯುತ್ತಿದೆ.